ಶನಿವಾರ, ಫೆಬ್ರವರಿ 29, 2020
19 °C
ತುಮಕೂರು ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಸಿಎಎ, ಎನ್‌ಆರ್‌ಸಿ ವಿರುದ್ಧ ತುಮಕೂರು ಪ್ರಗತಿಪರ ಮಹಿಳಾ ಸಂಘಟನೆ ಒಕ್ಕೂಟ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿರೋಧಿಸಿ ತುಮಕೂರು ಜಿಲ್ಲೆ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು ನಗರದ ಟೌನ್‌ಹಾಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧೆಡೆಯಿಂದ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾವಿರಾರು ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೇಂದ್ರ ಸರ್ಕಾರವು ಮುಸ್ಲಿಮರು ಹಾಗೂ ಈ ದೇಶದ ಮೂಲನಿವಾಸಿಗಳನ್ನು ಗುರಿಯಾಗಿಸಿಕೊಂಡು ಸಂವಿಧಾನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯ ಜನರು ಟೌನ್‌ಹಾಲ್‌ ವೃತ್ತದಲ್ಲಿ ಜಮಾಯಿಸಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಪ್ರತಿಭಟನಾ ಸಭೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಮಾತನಾಡಿ, ‘ದೇಶದಲ್ಲಿ ಇಂದು ಸಂವಿಧಾನವನ್ನು ಉಳಿಸಿಕೊಳ್ಳುವ ದೊಡ್ಡ ಸವಾಲು ನಮ್ಮ ಮುಂದಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಸಂವಿಧಾನ ಉಳಿಸುವ ಕೆಲಸ ಮಾಡಬೇಕಿದೆ’ ಎಂದರು.

ದೇಶದ ಗೃಹಮಂತ್ರಿ ಅಮಿತಾ ಶಾ ಅವರು ಪೌರತ್ವ ಕಾಯ್ದೆ ಸಂಪೂರ್ಣ ಜಾರಿಗೆ ಬರುವವರೆಗೂ ವಿರಮಿಸುವುದಿಲ್ಲ ಎಂದಿದ್ದಾರೆ. ಆದರೆ, ಈ ದೇಶದ ಸಂವಿಧಾನ ಉಳಿಸಲು ಜೀವನದ ಕೊನೆಯ ಉಸಿರು ಇರುವವರೆಗೂ ವಿರಮಿಸುವುದಿಲ್ಲ ಎಂದು ನಾವು ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ನಾವು ನಮ್ಮ 14ನೇ ಪ್ರಣಾಳಿಕೆಯಲ್ಲಿ ಹೇಳಿದ್ದ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಇದೇ ಪ್ರಣಾಳಿಕೆಯಲ್ಲಿ ಹೇಳಿದ್ದ ವರ್ಷಕ್ಕೆ 2 ಕೋಟಿ ಉದ್ಯೋಗ ಏಕೆ ಸೃಷ್ಟಿಸಿಲ್ಲ. ಕಪ್ಪುಹಣ ಏಕೆ ತಂದಿಲ್ಲ. ಜನರ ಖಾತೆಗೆ ₹15 ಲಕ್ಷ ಏಕೆ ಹಾಕಿಲ್ಲ ಎಂದು ಪ್ರಶ್ನಿಸಿದರು.

ತುಮಕೂರು ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ ಮಾತನಾಡಿ, ‘ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಸಿ ನಾವೆಲ್ಲರೂ ಯಾವುದೇ ಬೇಧಭಾವವಿಲ್ಲದೇ 70 ವರ್ಷ ನಾವೆಲ್ಲರೂ ಒಟ್ಟಾಗಿ ಕಳೆದಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಮಾತ್ರ ಪಾಕಿಸ್ತಾನದ ಪಟ್ಟ ಕಟ್ಟುತ್ತಿದೆ. ಈ ಮೂಲಕ ನಮ್ಮ ತಾಳ್ಮೆ ಕೆಣಕುತ್ತಿದೆ. ನಾವು ಭಾರತೀಯರು ನಾವು ಇಲ್ಲೇ ಇರುತ್ತೇವೆ. ನೀವು ಬೇಕಿದ್ದರೆ ಪಾಕಿಸ್ತಾನಕ್ಕೆ ಹೋಗಿ’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಎಂಎಸ್‌ಎಸ್‌ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಮಹಿಳಾ ಮುಖಂಡರಾದ ಶೀಮಾ ಮೊಹಸಿ, ಜೈನಬ್ ಮೊಹಮ್ಮದಿ, ಭಾರತಿ, ಹರ್ಷಿಯಾ, ತಾಹೇರಾ ಬಾನು, ಆಯಿಷಾ ಬಾನು, ಎಂ.ವಿ.ಕಲ್ಯಾಣಿ, ನುಸ್ರತ್ ಬಾನು ಸೇರಿದಂತೆ ಹಲವರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು