ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಮಧ್ಯಂತರ ಪರೀಕ್ಷೆಗೆ ವಿರೋಧ; ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

Last Updated 19 ನವೆಂಬರ್ 2021, 3:12 IST
ಅಕ್ಷರ ಗಾತ್ರ

ತುಮಕೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಧ್ಯಂತರ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಗುರುವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಂತರ ಅವಧಿಯಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ವಿದ್ಯಾರ್ಥಿಗಳ ಹಿತವನ್ನು ಬಲಿಕೊಟ್ಟು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಂಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠಗಳು ನಡೆದಿಲ್ಲ. ಇತ್ತೀಚೆಗಷ್ಟೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಕೋವಿಡ್ ಆತಂಕದಿಂದಾಗಿ ಸಮರ್ಪಕವಾಗಿ ತರಗತಿಗಳು ನಡೆದಿಲ್ಲ. ಆದರೆ ಪದವಿಪೂರ್ವ ಶಿಕ್ಷಣ ಮಂಡಳಿಯು ವಾಸ್ತವ ಪರಿಸ್ಥಿತಿಯನ್ನು ಅರಿಯದೆ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

ಇಲಾಖೆಯಿಂದಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಏಕಕಾಲಕ್ಕೆ ಪರೀಕ್ಷೆ ನಡೆಸಲು ಮುಂದಾಗಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲು ಇಲಾಖೆಗೆ ಕಳುಹಿಸಲಾಗುತ್ತದೆ. ಮೌಲ್ಯಮಾಪನ ಕಾರ್ಯಕ್ಕೆ ಉಪನ್ಯಾಸಕರನ್ನು ತೊಡಗಿಸಿಕೊಂಡರೆ ಕೋವಿಡ್ ಪರಿಸ್ಥಿತಿಯಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪಾಠ ಮಾಡುವವರು ಯಾರು ಎಂದು ಪ್ರಶ್ನಿಸಿದರು.

ಹೊಸ ನೀತಿ ಜಾರಿಗೊಳಿಸಲಿ. ಆದರೆ ಹೊಸ ಪದ್ಧತಿಯಿಂದ ವಿದ್ಯಾರ್ಥಿಗಳ ಮೇಲೆ ಯಾವ ರೀತಿಯಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದನ್ನೂ ಅರ್ಥೈಸಬೇಕು ಎಂದು ಮನವಿ ಮಾಡಿದರು.

ಎಬಿವಿಪಿ ವಿಭಾಗ ಕಾರ್ಯದರ್ಶಿ ಅಪ್ಪು ಪಾಟೀಲ್, ನಗರ ಕಾರ್ಯದರ್ಶಿ ಪ್ರತಾಪ್ ಸಿಂಹ, ವಿದ್ಯಾರ್ಥಿನಿ ಮುಖಂಡರಾದ ಕೆ.ಸಿ.ಅರ್ಪಿತಾ, ಚೈತ್ರ, ಸಿದ್ಧಾರ್ಥ್, ಪವನ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT