ಗುರುವಾರ , ಜೂಲೈ 9, 2020
21 °C

ತುಮಕೂರು | ಪರಿಶಿಷ್ಟರ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಪರಿಶಿಷ್ಟರ ವಸತಿ ನಿಲಯಗಳು, ವಸತಿಶಾಲೆಗಳಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ನಂತರ ಸ್ಯಾನಿಟೈಸ್ ಸೇರಿದಂತೆ ಯಾವುದೇ ರೀತಿ ಸ್ವಚ್ಛತಾ ಕಾರ್ಯಗಳನ್ನು ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಕೈಗೊಳ್ಳುತ್ತಿಲ್ಲ ಎಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಹಾಸ್ಟೆಲ್‍ಗೆ ಬರುವುದಕ್ಕೆ ಭಯಪಡುತ್ತಿದ್ದಾರೆ. ಅಧಿಕಾರಿಗಳು ವಸತಿ ನಿಲಯ ಹಾಗೂ ಶಾಲೆಗಳನ್ನು ಸ್ವಚ್ಛಗೊಳಿಸಿ, ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಎಚ್ಚೆತ್ತುಕೊಳ್ಳದಿದ್ದರೆ ಲಾಕ್‌ಡೌನ್ ಪೂರ್ಣವಾದ ನಂತರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದರು.

ಗುಬ್ಬಿ ತಹಶೀಲ್ದಾರ್ ಮಮತಾ ಅವರನ್ನು ವರ್ಗಾವಣೆ ಮಾಡಲಾಯಿತು. ಡಿಎಚ್‍ಒ ಆಗಿದ್ದ ಚಂದ್ರಿಕಾ ಅವರ ಮೇಲೆ ಸಲ್ಲದ ಆರೋಪ ಮಾಡಿ ವರ್ಗಾವಣೆ ಮಾಡಲಾಯಿತು ಎಂದು ದೂರಿದರು.

ದಲಿತ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಜಿಲ್ಲೆಯ ಶಾಸಕರು ಹಾಗೂ ಸಂಸದರು ವಿಫಲರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ಧಾರ ಪ್ರಶ್ನಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಶಾಸಕ ಡಾ.ಜಿ.ಪರಮೇಶ್ವರ ಪತ್ರಬರೆದಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

ಮಧು, ಎಚ್.ಬಿ.ರಾಜೇಶ್, ಸತೀಶ್, ಚೇಳೂರು ವೆಂಕಟೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ದಲಿತ ವಿರೋಧಿ ಬಿಜೆಪಿ: ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಪಶು ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿರುವ ಸಂಜೀವರಾಯ ಅವರಿಗೆ ಸೇವಾ ಹಿರಿತನದ ಆಧಾರದ ಮೇಲೆ ಪ್ರಭಾರ ಉಪನಿರ್ದೇಶಕರ ಹುದ್ದೆ ನೀಡಬೇಕಿದ್ದರೂ ಸೇವಾ ಹಿರಿತನವೇ ಇಲ್ಲದವರಿಗೆ ಜವಾಬ್ದಾರಿ ನೀಡಲಾಗಿದೆ. ತುಮಕೂರು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕರಾಗಿ ಡಾ.ಸುರೇಶ್‍ಬಾಬು ಅಧಿಕಾರವಹಿಸಿಕೊಂಡ 24ಗಂಟೆಯೊಳಗೆ ವರ್ಗಾವಣೆ ಮಾಡಲಾಗಿದೆ ಎಂದು ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.