ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಲೇಖನಿ ಸ್ಥಗಿತ ಚಳವಳಿ: ಗ್ರಾಮ ಆಡಳಿತಾಧಿಕಾರಿ ಎಚ್ಚರಿಕೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ. 26ರಿಂದ ಅನಿರ್ದಿಷ್ಟಾವಧಿ ಮುಷ್ಕರ
Published : 24 ಸೆಪ್ಟೆಂಬರ್ 2024, 3:54 IST
Last Updated : 24 ಸೆಪ್ಟೆಂಬರ್ 2024, 3:54 IST
ಫಾಲೋ ಮಾಡಿ
Comments

ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಮೊಬೈಲ್ ಸೇರಿದಂತೆ ಅಗತ್ಯ ಸಲಕರಣೆ, ಸೌಲಭ್ಯಗಳನ್ನು ಒದಗಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ಒತ್ತಾಯಿಸಿದರು.

ಜಿಲ್ಲಾಧಿಕಾರಿಗೆ ಸೋಮವಾರ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ದೇವರಾಜು ನೇತೃತ್ವದಲ್ಲಿ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು.

ಗ್ರಾಮ ಆಡಳಿತಾಧಿಕಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ. 26ರಿಂದ ಮೊಬೈಲ್ ಆ್ಯಪ್, ವೆಬ್ ಅಪ್ಲಿಕೇಷನ್ ಹಾಗೂ ಲೇಖನಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ 17ಕ್ಕೂ ಅಧಿಕ ಮೊಬೈಲ್ ಆ್ಯಪ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹಾಕಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಸಂಪರ್ಕ, ಸ್ಕ್ಯಾನರ್ ನೀಡದೆ ಕೆಲಸ ಮಾಡಿಸಲಾಗುತ್ತಿದೆ. ಇದರಿಂದ ಕರ್ತವ್ಯ ನಿರ್ವಹಿಸುವುದು ಕಷ್ಟಕರವಾಗಿದ್ದು, ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಆಧಾರ್ ಜೋಡಣೆ, ಲ್ಯಾಂಡ್ ಬೀಟ್, ಬಹರ್ ಹುಕುಂ, ಹಕ್ಕುಪತ್ರ, ನಮೂನೆ 1–5ರ ವೆಬ್ ಅಪ್ಲಿಕೇಷನ್, ಪೌತಿ ಖಾತೆ ಆಂದೋಲನ ಆ್ಯಪ್ ಸೇವೆಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೆಲಸ ನಿರ್ವಹಣೆಗೆ ಮೂಲಭೂತ ಸೌಲಭ್ಯಗಳ ಕೊರತೆಯೂ ಕಾಡುತ್ತಿದ್ದು, ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ, ಪ್ರಿಂಟರ್, ಸ್ಕ್ಯಾನ‌ರ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಕಾಲಕ್ಕೆ ಪದೋನ್ನತಿ ಸಿಗುತ್ತಿಲ್ಲ. 30 ವರ್ಷಗಳಿಗೂ ಹೆಚ್ಚು ಸಮಯ ಕೆಲಸ ನಿರ್ವಹಿಸಿದರೂ ಬಡ್ತಿ ಸಿಗದಾಗಿದೆ. ರಾಜ್ಯದಲ್ಲಿ 1,196 ಗ್ರೇಡ್-1 ಗ್ರಾಮ ಪಂಚಾಯಿತಿ, 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ರಾಜಸ್ವ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರಿಷ್ಕರಿಸಿ ಪದೋನ್ನತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಂತರ್ ಜಿಲ್ಲಾ ಪತಿ- ಪತ್ನಿ ಪ್ರಕರಣಗಳ ವರ್ಗಾವಣೆಗೆ ಚಾಲನೆ ನೀಡಬೇಕು. ಸರ್ಕಾರಿ ರಜಾ ದಿನಗಳಲ್ಲಿ ಕೆಲಸ ಮಾಡಿಸಬಾರದು. 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ ಜಿಲ್ಲಾ ವರ್ಗಾವಣೆಗೆ ಹೊಸ ಮಾರ್ಗಸೂಚಿ ರಚಿಸಬೇಕು. ಆಯುಕ್ತಾಲಯ ಮಟ್ಟದಲ್ಲಿನ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಮೊಬೈಲ್ ತಂತ್ರಾಂಶ ಬಳಸಿ ಕೆಲಸ ಮಾಡುವ ವಿಚಾರವಾಗಿ ಈವರೆ ಆಗಿರುವ ಎಲ್ಲಾ ಅಮಾನತು ರದ್ದುಪಡಿಸಬೇಕು. ಪ್ರಯಾಣ ಭತ್ಯೆಯನ್ನು ₹500ರಿಂದ ₹3 ಸಾವಿರಕ್ಕೆ ಹೆಚ್ಚಿಸಬೇಕು. ಕೆಲಸದ ಅವಧಿಗೆ ಮುನ್ನ, ಕೆಲಸ ಮುಕ್ತಾಯದ ನಂತರ ವರ್ಚುವಲ್ ಸಭೆ ನಡೆಸಬಾರದು ಎಂದು ಆಗ್ರಹಿಸಿದ್ದಾರೆ.

ಸಂಘದ ಗೌರವಾಧ್ಯಕ್ಷ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಪದಾಧಿಕಾರಿಗಳಾದ ಮೋಹನ್, ಯಮನೂರು, ರಾಘವೇಂದ್ರಸ್ವಾಮಿ, ಎಚ್.ಸಿ.ಹೇಮ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT