ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕಂಟೈನ್‍ಮೆಂಟ್‌ ವಲಯದ ಎಲ್ಲರ ಪರೀಕ್ಷೆ

ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ
Last Updated 29 ಜೂನ್ 2020, 15:20 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿರುವ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೊರೊನಾ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕೋವಿಡ್–19 ಸಂಬಂಧಿಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಇರುವುದರಿಂದ ಹೆಚ್ಚಿನ ಪರೀಕ್ಷೆ ನಡೆಸಲು ಅನುಕೂಲ ಆಗುತ್ತದೆ ಎಂದರು.

ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್‍ಗಳನ್ನು ಹೆಚ್ಚಿಸಿ, ಕ್ಲಿನಿಕ್‍ಗೆ ಬಂದ ಪ್ರತಿಯೊಬ್ಬರ ತಪಾಸಣೆ ನಡೆಸಬೇಕು. ನಕಲಿ ವೈದ್ಯರು, ವೈದ್ಯರ ಚೀಟಿ ಇಲ್ಲದೆ ಜ್ವರ, ನೆಗಡಿ, ಶೀತ, ಉಸಿರಾಟ ತೊಂದರೆಗೆ ಔಷಧಿಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ. 8 ರೋಗಿಗಳಲ್ಲಿ ಮಾತ್ರ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲು ಅವಕಾಶ ಇದೆ. ನಗರದ ಹೊರ ವಲಯದಲ್ಲಿರುವ ಟ್ರಕ್‍ ಟರ್ಮಿನಲ್ ಸಮೀಪದ ಕಟ್ಟಡಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ ಅವರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು, ನಿಯಂತ್ರಣ ಮತ್ತಿತರ ಮಾಹಿತಿ ನೀಡಿದರು.

ಸಂಸದ ಜಿ.ಎಸ್.ಬಸವರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಉಪವಿಭಾಗಾಧಿಕಾರಿ ಅಜಯ್ ಪಾಲ್ಗೊಂಡಿದ್ದರು.

ಹಾಗಲವಾಡಿ ಯೋಜನೆಗೆ ಜಮೀನು ಬಿಟ್ಟುಕೊಡಿ

ಬಿಕ್ಕೆಗುಡ್ಡ ಮತ್ತು ಹಾಗಲವಾಡಿ ಕುಡಿಯುವ ನೀರು ಯೋಜನೆ ನಿರ್ಮಾಣಕ್ಕೆ ರೈತರು ತಮ್ಮ ಜಮೀನು ಬಿಟ್ಟುಕೊಟ್ಟು ಯೋಜನೆಗಳನ್ನು ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಜೆ.ಸಿ.ಮಾಧುಸ್ವಾಮಿ ಕೋರಿದರು.

ಹೇಮಾವತಿ ನಾಲಾ ಎಂಜಿನಿಯರ್‌ಗಳ ಸಭೆಯಲ್ಲಿ ಮಾತನಾಡಿ, ‘ಇವು ಕುಡಿಯುವ ನೀರಿನ ಯೋಜನೆಗಳಾಗಿವೆ. ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿಸಬೇಕಾಗಿತ್ತು. ಆದರೆ ಕೆಲವು ಕಡೆ ರೈತರು ಜಮೀನು ಬಿಟ್ಟು ಕೊಡದೆ ಯೋಜನೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ನ್ಯಾಯಸಮತ ಬೆಲೆ ನೀಡಲಾಗುವುದು’ ಎಂದರು.

ಯೋಜನೆ ಹಾದುಹೋಗುವ ಮಾರ್ಗಮಧ್ಯದಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ರೈತರು ಈ ವೇಳೆ ಕೋರಿದರು.

ವಿಶ್ವೇಶ್ವರಯ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಹೇಮಾವತಿ ನಾಲಾ ಮುಖ್ಯ ಎಂಜಿನಿಯರ್ ಬಾಲಕೃಷ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT