ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ದುಬಾರಿ; ಪ್ರತಿಭಟನೆ

Last Updated 9 ಫೆಬ್ರುವರಿ 2021, 2:07 IST
ಅಕ್ಷರ ಗಾತ್ರ

ತುಮಕೂರು: ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಇಂಧನ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದ ಬಿಎಸ್‌ಎನ್‌ಎಲ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣಕು ಶವಯಾತ್ರೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಇಂಧನ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿದರು.

ಕೊರೊನಾ ಸೋಂಕಿನಿಂದಾಗಿ ಜನರು ತತ್ತರಿಸಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕರ ಕಷ್ಟವನ್ನು ಕಡಿಮೆ ಮಾಡುವ ಬದಲು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನಗಳ ಮೇಲೆ ಶೇ 30ರಷ್ಟು ತೆರಿಗೆ ವಿಧಿಸಿದ್ದು, ಜನರ ಬದುಕಿಗೆ ಕೊಳ್ಳಿ ಇಡಲು ಹೊರಟಿವೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದರು.

ಇಂಧನ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ದುಬಾರಿಯಾಗಿದೆ. ಜನರು ಬಳಸುವ ಅಗತ್ಯ ವಸ್ತುಗಳು ಗಗನಕ್ಕೇರಿವೆ. ಬಡವರು ಜೀವನ ನಡೆಸುವುದು ದುರ್ಲಬವಾಗಿದೆ ಎಂದರು.

ಇಂಧನ ಬೆಲೆ ಹೆಚ್ಚಳ ಮಾಡುತ್ತಿದ್ದರೂ, ಜನಸಾಮಾನ್ಯರು ತೊಂದರೆಗೆ ಸಿಲುಕಿದ್ದರೂ ಬಿಜೆಪಿ ಮುಖಂಡರು ಬಾಯಿ ಬಿಡುತ್ತಿಲ್ಲ. ರೈತರ ಹೆಸರಿನಲ್ಲಿ ಸೆಸ್‌ ಹಾಕಿ, ಹಾವು ಹೊಡೆದು ಹದ್ದಿಗೆ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ತಾಜುದ್ದೀನ್ ಷರೀಫ್ ದೂರಿದರು.

ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಅವರಂತಹವರ ಕೈಗೆ ಅಧಿಕಾರ ಕೊಟ್ಟು ಜನರು ತಪ್ಪು ಮಾಡಿದ್ದಾರೆ. ಜನಸಾಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ದೇವರು, ಧರ್ಮದ ಹೆಸರಿನಲ್ಲಿ ಆಡಳಿತ ನಡೆಸುತ್ತಿದ್ದು, ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದರೂ ಗಮನಿಸುತ್ತಿಲ್ಲ. ಉದ್ಯೋಗ ಕೊಟ್ಟಿರುವ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಿ, ಇರುವ ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಪಿ.ಎನ್.ರಾಮಯ್ಯ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT