ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಜ್ಜು

Last Updated 9 ಜುಲೈ 2021, 4:11 IST
ಅಕ್ಷರ ಗಾತ್ರ

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿ ನಿರತವಾಗಿದೆ. ಪರೀಕ್ಷೆಗೆ ಮಕ್ಕಳನ್ನು ಕರೆತರುವುದು, ತಿಂಡಿ ವ್ಯವಸ್ಥೆಯಿಂದ ಹಿಡಿದು ಎಲ್ಲಾ ಅಗತ್ಯ ಸೌಲಭ್ಯ ಕಲ್ಪಿಸಲು ಸಜ್ಜಾಗಿದೆ.

ಕೊರೊನಾ ಸೋಂಕಿನ ಲಕ್ಷಣ ಇದ್ದವರು, ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕರೆದುಕೊಂಡು ಬರಲು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಲಾಗಿದೆ. ಅಂತಹವರಿಗೆ ಪ್ರತ್ಯೇಕ ಕೊಠಡಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ತಪಾಸಣೆಗೆ ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗುತ್ತದೆ. ಒಂದು ಬೆಂಚಿನಲ್ಲಿ ಇಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲುಸ್ಥಳಾವಕಾಶ ಮಾಡಿಕೊಡಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಜುಲೈ 19ರಿಂದ 22ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಗುರುವಾರ ಸುದೀರ್ಘವಾಗಿ ಚರ್ಚಿಸಲಾಯಿತು. ಯಾವುದೇ ಸಣ್ಣಪುಟ್ಟ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಶಿಕ್ಷಣ ಇಲಾಖೆ ಜತೆಗೆ ಇತರೆ ಇಲಾಖೆಗಳು ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದರು.

ಎಲ್ಲಾ ರೀತಿಯಲ್ಲೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಕೊಠಡಿ, ಪೀಠೋಪಕರಣ ಸ್ಯಾನಿಟೈಜ್ ಮಾಡಬೇಕು. ಮಕ್ಕಳಿಗೆ ಅಗತ್ಯವಿರುವಷ್ಟು ಮಾಸ್ಕ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿ, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ, ಅಧಿಕಾರಿಗಳು ಪರೀಕ್ಷಾ ದಿನದಂದು ಬೆಳಗ್ಗೆ 7.30ಕ್ಕೆ ಹಾಜರಾಗಿ ಪರೀಕ್ಷಾ ಕೇಂದ್ರ ತೆರೆಯಬೇಕು. ಸಿಬ್ಬಂದಿ, ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಲಸಿಕೆ ಪಡೆಯದಿದ್ದರೆ ಕರ್ತವ್ಯಕ್ಕೆ ನಿಯೋಜನೆ ಮಾಡಬಾರದು ಎಂದು ನಿರ್ದೇಶನ ನೀಡಿದರು.

ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು. ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಆರಂಭವಾಗುವ ನಿಗದಿತ ಸಮಯಕ್ಕೆ ಮುನ್ನ ಬರುತ್ತಾರೆ. ಹಸಿವಿನಿಂದ ಬಳಲದಂತೆ ನೋಡಿಕೊಂಡು ಅನಿವಾರ್ಯವಿರುವ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಬೇಕು. ತಹಶೀಲ್ದಾರ್, ಇಒಗಳು ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಪ್ರಶ್ನೆ ಪತ್ರಿಕೆ ರವಾನೆಗೆ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ‘ಪರೀಕ್ಷಾ ಕೇಂದ್ರಗಳಲ್ಲಿನಿಯಮಾನುಸಾರ ಪ್ರಶ್ನೆ ಪತ್ರಿಕೆ ತೆರೆಯಬೇಕು. ಲಸಿಕೆ ಪಡೆದವರನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಬೇಕು. ಮಕ್ಕಳನ್ನು ಕರೆತಂದ ಪೋಷಕರು ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ದೂರ ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ‘ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಬೇಕು. ಶೌಚಾಲಯ ಶುಚಿಗೊಳಿಸಿ, ಸಮರ್ಪಕ ನೀರು ಒದಗಿಸಬೇಕು. ವಿದ್ಯಾರ್ಥಿಗಳು ಸಮಯ ನೋಡಿಕೊಂಡು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಗಡಿಯಾರ ಹಾಕಬೇಕು’ ಎಂದು ನಿರ್ದೇಶಿಸಿದರು.

ಡಿಡಿಪಿಐಗಳಾದ ಸಿ.ನಂಜಯ್ಯ, ರೇವಣಸಿದ್ದಪ್ಪ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT