ಭಾನುವಾರ, ಜೂನ್ 26, 2022
28 °C

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಬಹುತೇಕ ಅಂತಿಮ ಘಟ್ಟ ತಲುಪಿದೆ.

ಕೋವಿಡ್‌–19ನಿಂದಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಮೊದಲ ಅಲೆಯು ವಯಸ್ಸಾದವರನ್ನು ಹೆಚ್ಚು ಬಾಧಿಸಿತ್ತು. ಎರಡನೇ ಅಲೆಯು ಮಧ್ಯ ವಯಸ್ಕರನ್ನು ಕಾಡಿದ್ದು, ಸಾಕಷ್ಟು ಸಾವು ನೋವು ಸಂಭವಿಸಿದೆ. ಮೂರನೇ ಅಲೆ ಎದುರಾದರೆ ಅದು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಹೇಳುತ್ತಿದ್ದು, ಅದಕ್ಕಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹೆಚ್ಚು ಎಚ್ಚರಿಕೆ ವಹಿಸುತ್ತಿದೆ.

ಹಿಂದಿನ ವರ್ಷಗಳಲ್ಲಿ ಪ್ರತಿ ಡೆಸ್ಕ್‌ಗೆ ಇಬ್ಬರು ವಿದ್ಯಾರ್ಥಿಗಳು ಕುಳಿತು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಸಲ ಪ್ರತಿ ಡೆಸ್ಕ್‌ಗೆ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಬ್ಬರಿಂದ ಮತ್ತೊಬ್ಬರಿಗೆ 6 ಅಡಿಗಳ ಅಂತರ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಒಂದು ಕೊಠಡಿಯಲ್ಲಿ 8ರಿಂದ 10 ವಿದ್ಯಾರ್ಥಿಗಳ ಮಿತಿ ಮೀರದಂತೆ ಗಮನಿಸಲಾಗುತ್ತಿದೆ. ಒಂದು ಕೇಂದ್ರದಲ್ಲಿ 100 ವಿದ್ಯಾರ್ಥಿಗಳ ಮಿತಿ ದಾಟದಂತೆ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಮನೆಯಿಂದ 3 ಕಿ.ಮೀ ವ್ಯಾಪ್ತಿಯ ಒಳಗೆ ಪರೀಕ್ಷಾ ಕೇಂದ್ರ ಇರುವಂತೆ ನೋಡಿಕೊಳ್ಳಲಾಗಿದೆ.

ಇದರಿಂದಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯೂ ಹೆಚ್ಚಾಗಲಿವೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಕಳೆದ ಬಾರಿ 79 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದರೆ, ಈ ಸಲ 139 ಕೇಂದ್ರಗಳನ್ನು ತೆರೆಯಲಾಗಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 59 ಕೇಂದ್ರಗಳನ್ನು 81ಕ್ಕೆ ಹೆಚ್ಚಿಸಲಾಗಿದೆ. ಒಟ್ಟು 220 ಕೇಂದ್ರಗಳಲ್ಲಿ 35,972 ಮಕ್ಕಳು ಪರೀಕ್ಷೆ ಎದುರಿಸಲಿದ್ದಾರೆ.

‘ಪರೀಕ್ಷೆ ಎದುರಿಸುವುದು, ಬದಲಾಗಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಬಗ್ಗೆ ಆನ್‌ಲೈನ್ ತರಗತಿಯಲ್ಲೇ ತಿಳಿಸಿಕೊಡಲಾಗುತ್ತಿದೆ. ಅಗತ್ಯ ಮಾರ್ಗದರ್ಶನ ಮಾಡಲಾಗುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆದು ಪರೀಕ್ಷೆ ಸಮಯದಲ್ಲಿ ಏನೆಲ್ಲ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಶಿಕ್ಷಕರಿಗೆ ಮಾರ್ಗದರ್ಶನ ಕೊಡಿಸಲಾಗುತ್ತಿದೆ. ಎಲ್ಲಾ ರೀತಿಯಿಂದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ತುಮಕೂರು ಶೈಕ್ಷಣಿಕ ಜಿಲ್ಲೆ ಡಿಡಿಪಿಐ ಸಿ.ನಂಜಯ್ಯ ತಿಳಿಸಿದರು.

‘ಪ್ರಶ್ನೆ ಪತ್ರಿಕೆ ಹಾಗೂ ಪರೀಕ್ಷೆ ಬರೆಯುವ ಮಾದರಿಯೂ ಬದಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಕೆಲಸ ನಡೆದಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್ ಬಳಕೆ ಕುರಿತು ಮಾಹಿತಿ ನೀಡಲಿದೆ. ಈ ಬಗ್ಗೆ ಸೋಮವಾರದಿಂದ ಮಾರ್ಗದರ್ಶನ ಮಾಡಲಾಗುತ್ತದೆ’ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆ ಡಿಡಿಪಿಐ ರೇವಣಸಿದ್ದಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು