ಮಂಗಳವಾರ, ಆಗಸ್ಟ್ 20, 2019
27 °C
ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ಬೆಳಗುಂಬ ಪಂಚಾಯಿತಿಗೆ ಮುತ್ತಿಗೆ

Published:
Updated:
Prajavani

ತುಮಕೂರು: ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ನಗರದ ಹೊರವಲಯದ ಬೆಳಗುಂಬ ಗ್ರಾಮ ಪಂಚಾಯಿತಿ ಕಚೇರಿಗೆ ಮಹಿಳೆಯರು ಬುಧವಾರ ಮುತ್ತಿಗೆ ಹಾಕಿದರು. ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಜನರ ಮನವಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಮತ್ತು ಅಧ್ಯಕ್ಷರು ಸ್ಪಂದಿಸುತ್ತಿಲ್ಲ. ಇದರಿಂದ ಬೇಸರವಾಗಿದೆ. ನಾನು ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರಯ್ಯ ಅವರು ಈ ವೇಳೆ ತಿಳಿಸಿದರು.

ಅಧಿಕಾರಿಗಳು ಮೊದಲು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿದರು.

ಪಿಡಿಒ ವರ್ಗಾವಣೆಗೆ ಮನವಿ: ಬೆಳಗುಂಬ ಪಂಚಾಯಿತಿ ಪಿಡಿಒ ಮೋಹನ್ ಕುಮಾರ್ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮನವಿ ಸಲ್ಲಿಸಿದ್ದಾರೆ.

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಸೌಲಭ್ಯಗಳು ಇಲ್ಲ. ಈ ಬಗ್ಗೆ ಪಿಡಿಒ ಗಮನಕ್ಕೆ ಹಲವು ಬಾರಿ ತಂದರೂ ಪ್ರಯೋಜನವಾಗಿಲ್ಲ. ಕಚೇರಿಯ ಗೋಪ್ಯತೆ ಕಾಪಾಡದೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮಾತನ್ನು ಲೆಕ್ಕಿಸದೆ ಕಚೇರಿಯ ದಾಖಲೆಗಳನ್ನು ಬೇರೊಬ್ಬರಿಗೆ ನೀಡಿದ್ದಾರೆ ಎಂದು ದೂರಿದ್ದಾರೆ.

ಪ್ರತಿ ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ. ಕೊಳವೆಬಾವಿಗಳು ಸುಟ್ಟಿವೆ. ಅಲ್ಲದೆ ಬೆಳಗುಂಬದ ಕೊಳವೆಬಾವಿಗಳಲ್ಲಿ ನೀರಿದ್ದರೂ ನೀರು ಇಲ್ಲ ಎಂದು ಸುಳ್ಳು ಹೇಳಿ ಟ್ಯಾಂಕರ್ ಪೂರೈಕೆಗೆ ಅವಕಾಶ ನೀಡಿದ್ದರು. ನಂತರ ಗ್ರಾಮಸ್ಥರ ಸಮಕ್ಷಮದಲ್ಲಿ ಕೊಳವೆಬಾವಿ ಪರಿಶೀಲಿಸಿದಾಗ ನೀರು ಇರುವುದು ಕಂಡು ಬಂದಿದೆ. ಟ್ಯಾಂಕರ್ ನೀರು ಪೂರೈಕೆ ಮೂಲಕ ಹಣವನ್ನು ನಷ್ಟ ಮಾಡಿದ್ದಾರೆ ಎಂದು ಗ್ರಾಮಸ್ಥರು ಮನವಿಯಲ್ಲಿ ತಿಳಿಸಿದ್ದಾರೆ.

Post Comments (+)