ಶುಕ್ರವಾರ, ಜೂನ್ 25, 2021
29 °C
ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಕಾಯ್ದೆಗಳ ತಿದ್ದುಪಡಿಗೆ ತೀವ್ರ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೊರೊನಾ ಸನ್ನಿವೇಶ ಬಳಸಿಕೊಂಡು ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯವಸ್ತುಗಳ ಕಾಯ್ದೆ, ಭೂಕಂದಾಯ ಕಾಯ್ದೆಗಳನ್ನು ತಿದ್ದುಪಡಿಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮ ಖಂಡಿಸಿ ವಿವಿಧ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಕೆಎಸ್‍ಸಿಸಿ, ದಲಿತ ಸಂಘಟನೆಗಳ ಒಕ್ಕೂಟ, ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಎಐಕೆಎಸ್‍ಸಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು ಮಾತನಾಡಿ, ‘ನೂತನ ಶಿಕ್ಷಣ ನೀತಿ ಜಾರಿಯನ್ನು ಕೈಬಿಡಬೇಕು. ಆನ್‌ಲೈನ್ ಶಿಕ್ಷಣ ಮತ್ತು ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಿಷೇಧಿಸಬೇಕು. ಎಲ್ಲ ಕೃಷಿ ಸಾಲ ಮನ್ನಾ ಮಾಡಬೇಕು. ಹೊಸದಾಗಿ ಸಾಲ ನೀಡಬೇಕು. ಈಗ ವಿವಿಧ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ಕೈಬಿಡಬೇಕು’ ಎಂದು ಒತ್ತಾಯಿಸಿದರು.

ಆದಾಯ ತೆರಿಗೆ ಮಿತಿಯ ಹೊರಗಿರುವ ಎಲ್ಲ ಕುಟುಂಬಗಳಿಗೆ ಮುಂದಿನ ಆರು ತಿಂಗಳು ಮಾಸಿಕ ₹ 7,500 ಹಾಗೂ ಉಚಿತ ಪಡಿತರ ಸಾಮಗ್ರಿಗಳನ್ನು ವಿತರಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ನಗರ ಪ್ರದೇಶಗಳಿಗೆ ಯೋಜನೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸದೆ ಸಾರ್ವಜನಿಕ ವಲಯದ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿದೆ. ಇದನ್ನು ಈ ಕೂಡಲೇ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ, ಪಿಯುಸಿಎಲ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ದೊರೈರಾಜ್, ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎ.ನರಸಿಂಹಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘದ ಸಿ.ಅಜ್ಜಪ್ಪ, ತಾಜುದ್ದೀನ್ ಮಾತನಾಡಿದರು.

ಪ್ರಾಂತ ರೈತ ಸಂಘದ ಬಿ.ಉಮೇಶ್, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ರಂಗಧಾಮಯ್ಯ, ಎಐಟಿಯುಸಿ ಮುಖಂಡ ಕಂಬೇಗೌಡ, ಅಂಗನವಾಡಿ ನೌಕರರ ಸಂಘದ ಗೌರಮ್ಮ, ಜಬೀನ, ಗಂಗಾ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.