ಭಾನುವಾರ, ಫೆಬ್ರವರಿ 23, 2020
19 °C
ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಆಯುಕ್ತ ಆರ್.ಎಸ್. ಪೆದ್ದಪ್ಪಯ್ಯ ಸೂಚನೆ

ಹಾಸ್ಟೆಲ್ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿರುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಶೇ 90ರಷ್ಟು ಹೆಚ್ಚಿಸಲು ಕ್ರಮ ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆರ್.ಎಸ್.ಪೆದ್ದಪ್ಪಯ್ಯ ಸೂಚಿಸಿದರು.

ಜಿಲ್ಲಾ ಬಾಲಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ನಿಲಯದ ಮೇಲ್ವಿಚಾರಕರು ಫಲಿತಾಂಶ ವೃದ್ಧಿಸುವ ನಿಟ್ಟಿನಲ್ಲಿ ಜಿಲ್ಲೆಯ ತುಮಕೂರು-1, ಚಿಕ್ಕನಾಯಕನಹಳ್ಳಿ-2, ಗುಬ್ಬಿ-1, ಕುಣಿಗಲ್-1, ಪಾವಗಡ-4, ಮಧುಗಿರಿ-1, ಕೊರಟಗೆರೆ-1, ತುರುವೇಕೆರೆ-1, ಶಿರಾ-3, ತಿಪಟೂರು-1 ತಾಲ್ಲೂಕು ಕೇಂದ್ರಗಳಲ್ಲಿ ಆಯ್ದ ವಿದ್ಯಾರ್ಥಿನಿಲಯಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಂದರಂತೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದರು.

6 ರಿಂದ 9ನೇ ತರಗತಿಯಲ್ಲಿರುವ ಮಕ್ಕಳಿಗೆ ಪರೀಕ್ಷೆ ಸಮೀಪಿಸುತ್ತಿರುವುದರಿಂದ ತರಗತಿಗಳಿಗೆ, ತರಬೇತಿಗೆ ಗೈರುಹಾಜರಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಓದು-ಬರಹದಲ್ಲಿ ಗಮನ ಹರಿಸುವಂತೆ ವಿದ್ಯಾರ್ಥಿಗಳ ಜತೆಗಿದ್ದು ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಿಲಯದ ಮೇಲ್ವೀಚಾರಕರು ‘ಮಕ್ಕಳಿಗಾಗಿ ನಾನಿದ್ದೇನೆ–ನನಗಾಗಿ ಮಕ್ಕಳು ಇಲ್ಲ’ ಎಂಬ ಮನೋಭಾವ ರೂಢಿಸಿಕೊಂಡು ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೇ ಮಾಡಬೇಕು. ನೋಡಲ್ ಅಧಿಕಾರಿಗಳು ಪರೀಕ್ಷಾ ಸಿದ್ಧತೆಯ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ 100 ವಿದ್ಯಾರ್ಥಿನಿಲಯಗಳಿದ್ದು, ಎಲ್ಲಾ ವಿದ್ಯಾರ್ಥಿನಿಲಯಗಳಲ್ಲೂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಸುವಲ್ಲಿ ಇಲಾಖೆಯ ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ಅಲ್ಲದೆ, ವಿದ್ಯಾರ್ಥಿನಿಲಯಗಳ ಮೂಲ ಸೌಕರ್ಯಗಳನ್ನು ಒದಗಿಸಲು ಇಲಾಖೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಅನುದಾನ ಸಹ ನೀಡಲಿದೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಬಿ.ಟಿ. ಮಂಜುನಾಥ್, ಜಂಟಿ ನಿರ್ದೇಶಕ ಎಚ್.ಎಸ್.ಪ್ರೇಮನಾಥ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)