ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು |ಶಿಕ್ಷಕರ ಸಮಸ್ಯೆಗೆ ಸ್ಪಂದನೆ; ಖಾಲಿ ಹುದ್ದೆ ಭರ್ತಿ-ರಮೇಶ್‌ಬಾಬು

ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಲು ಮನವಿ
Published 12 ಮೇ 2024, 5:03 IST
Last Updated 12 ಮೇ 2024, 5:03 IST
ಅಕ್ಷರ ಗಾತ್ರ

ತುಮಕೂರು: ರಾಜ್ಯ ಸರ್ಕಾರ ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ ಅವರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ಬಾಬು ಇಲ್ಲಿ ಶನಿವಾರ ಮನವಿ ಮಾಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಜಿಲ್ಲೆಗಳಲ್ಲಿ ತುಮಕೂರಿನಲ್ಲಿ ಹೆಚ್ಚಿನ ಮತದಾರರಿದ್ದಾರೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ₹44 ಸಾವಿರ ಕೋಟಿ ಅನುದಾನ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಮೂಲಭೂತ ಸೌಕರ್ಯಗಳಿಗೆ ₹850 ಕೋಟಿ ಅನುದಾನ ಮೀಸಲಿಡಲಾಗಿದೆ. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗಿದೆ. ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ 35 ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿತ್ತು. ಈಗಲೂ ಸರ್ಕಾರ ಶಿಕ್ಷಕರ ಪ್ರಗತಿಗೆ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರ, ಶಿಕ್ಷಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಸಂರಕ್ಷಣೆ ಮಾಡುತ್ತಾ ಬಂದಿದೆ. ಚುನಾವಣೆಯಲ್ಲಿ ಶಿಕ್ಷಕ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು. ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಕೇಳಿಕೊಂಡರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನನ್ನನ್ನು ಸ್ಪರ್ಧಿಸುವಂತೆ ಕೇಳಿದರೂ ಬೇರೆ ಕಾರಣಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ‌. ಡಿ.ಟಿ.ಶ್ರೀನಿವಾಸ್‌ ಶಿಕ್ಷಣ‌ ಕ್ಷೇತ್ರದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ–ಜೆಡಿಎಸ್‌ ಈಗಾಗಲೇ ಮೈತ್ರಿ ಮಾಡಿಕೊಂಡಿವೆ. ಮುಂದಿನ ದಿನಗಳಲ್ಲಿ ಬಿಜೆಪಿಯರು ಸಂಸದ ಪ್ರಜ್ವಲ್‌ ರೇವಣ್ಣ ಫೋಟೊ ಹಾಕಿಕೊಂಡು ಪ್ರಚಾರ ಮಾಡಲಿ. ಅದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಗೇಲಿ ಮಾಡಿದರು.

ಕೆಪಿಸಿಸಿ ಕಾನೂನು ಘಟಕದ ರಾಜ್ಯ ಉಪಾಧ್ಯಕ್ಷ ದಿವಾಕರ್‌, ಮುಖಂಡರಾದ ಷಣ್ಮುಖಪ್ಪ, ಇಕ್ಬಾಲ್ ಅಹ್ಮದ್, ಸುಜಾತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT