ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅತ್ಯಾಚಾರ ಆರೋಪಿಗಳ ಶೀಘ್ರ ಬಂಧನ’

Last Updated 2 ಸೆಪ್ಟೆಂಬರ್ 2021, 4:11 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಚಿಕ್ಕಹಳ್ಳಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ ಆರೋಪಿಗಳ ಬಗ್ಗೆ ಪೊಲೀಸರಿಗೆ ಕೆಲವು ಸುಳಿವು ಸಿಕ್ಕಿದ್ದು, ಎರಡು–ಮೂರು ದಿನಗಳಲ್ಲಿ ಬಂಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್‌ಗೌಡ ಹೇಳಿದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳದಲ್ಲೇ ಕೆಲವು ಸಾಕ್ಷ್ಯಗಳು ಸಿಕ್ಕಿದ್ದು, ಆರೋಪಿಗಳ ಬಂಧನಕ್ಕೆ ನೆರವಾಯಿತು. ಆದರೆ ಈ ಘಟನೆಯಲ್ಲಿ ಸರಿಯಾದ ಮಾಹಿತಿ, ಸುಳಿವು
ಲಭ್ಯವಾಗದೆ ಆರೋಪಿಗಳ ಬಂಧನ ತಡವಾಗಿದೆ. ಈಗ ಕೆಲವು ಸುಳಿವು ಸಿಕ್ಕಿದ್ದು, ಶೀಘ್ರ ಬಂಧಿಸುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾಗಿ ಪತ್ರಿಕಾ
ಗೋಷ್ಠಿಯಲ್ಲಿ ಬುಧವಾರ ಸ್ಪಷ್ಟಪಡಿಸಿದರು.

ಗೃಹ ಸಚಿವರ ಭೇಟಿ: ಜಿಲ್ಲೆ ಘಟನೆಯ ವಿಚಾರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ತಂದಿದ್ದು, ಎರಡು ದಿನದಲ್ಲಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಲಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಒತ್ತಾಯಿಸಲಾಗಿದೆ. 6 ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗುವಂತೆ ಪೊಲೀಸರು ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮಾಂತರ ಕ್ಷೇತ್ರದ ಶಾಸಕರು ಪ್ರತಿಭಟನೆ ನಡೆಸಿ, ‘ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು, ಅದಕ್ಕೆ ಪೊಲೀಸರು ಕುಮ್ಮಕ್ಕು ನೀಡುತ್ತಿದ್ದಾರೆ. ಅಕ್ರಮಗಳನ್ನು ನಿಯಂತ್ರಿಸುತ್ತಿಲ್ಲ. ಇದರ ಪರಿಣಾಮವಾಗಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಇಂತಹ ವಿಚಾರದಲ್ಲಿ ರಾಜಕೀಯ ಬೆರೆಸಬಾರದು. ನಿರ್ದಿಷ್ಟ, ಖಚಿತ ಮಾಹಿತಿ ಇದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ಕೊಡಲಿ. ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲಿ. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಬಾರದು’ ಎಂದು ತಿರುಗೇಟು ನೀಡಿದರು.

ನಗರದಲ್ಲಿ ಹೆಚ್ಚುತ್ತಿರುವ ಸರಗಳವು, ಮನೆ ಕಳ್ಳತನ, ಮತ್ತಿತರ ಅಪರಾಧ ಕೃತ್ಯಗಳನ್ನು ಪೊಲೀಸರು ನಿಯಂತ್ರಿಸದಿರುವ ವಿಚಾರಗಳನ್ನುಗೃಹ ಸಚಿವರ ಗಮನಕ್ಕೆತರಲಾಗುವುದು. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿಶಂಕರ್, ವಕ್ತಾರ ಕೊಪ್ಪಲ್ ನಾಗರಾಜ್, ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ
ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT