ಶುಕ್ರವಾರ, ಜನವರಿ 24, 2020
28 °C
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್

ತುಮಕೂರು: ಸಂಭ್ರಮದ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜ.26 ರಂದು ಗಣರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಆಕರ್ಷಕವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ತಮ್ಮ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ‘ಜ.26ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಧ್ವಜಾರೋಹಣ ಮಾಡುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು’.

ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳನ್ನು ಒಳಗೊಂಡ ಸ್ವಾಗತ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ, ಪೆರೇಡ್ ಸಮಿತಿ, ಕ್ರೀಡಾಂಗಣ ಸಮಿತಿ, ಆಯ್ಕೆ ಸಮಿತಿ, ಸಿಹಿ ತಿಂಡಿ ವಿತರಣೆ ಸಮಿತಿಗಳನ್ನು ರಚಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ನಿರ್ದೇಶನ ನೀಡಿದರು.

ಕಾರ್ಯಕ್ರಮದಲ್ಲಿ ಆಕರ್ಷಕ ಕವಾಯತು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಕವಾಯತು ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಪೂರ್ವಾಭ್ಯಾಸ ಮಾಡುವ ಮಕ್ಕಳಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ತಾಲೀಮು ನಡೆಸಲು ಅನುವಾಗುವಂತೆ ಧೂಳು ಬರದ ರೀತಿಯಲ್ಲಿ ನೀರು ಸಿಂಪಡಿಸಿ ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಿದರು.

ಅಲ್ಲದೆ, ಧ್ವಜ ಸ್ತಂಭ ಹಾಗೂ ವೇದಿಕೆ ಸುತ್ತಮುತ್ತ ಹೂಕುಂಡಗಳಿಂದ ಅಲಂಕರಿಸಬೇಕು. ಗಣರಾಜ್ಯೋತ್ಸವದ ಅಂಗವಾಗಿ ಜ.25 ಹಾಗೂ 26ರಂದು ನಗರದ ಪ್ರಮುಖ ವೃತ್ತಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ, ತಳಿರು-ತೋರಣಗಳಿಂದ ಅಲಂಕರಿಸುವ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಅಲ್ಲದೆ, ಜ.26 ರಂದು ಸಂಜೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಚಲನ ಚಿತ್ರಗೀತೆಗಳನ್ನು ಹಾಡದಂತೆ, ವೇದಿಕೆ ಮೇಲೆ ಮದ್ದು ಸಿಡಿಸುವ ಕಾರ್ಯಕ್ರಮಗಳನ್ನು ನಡೆಸದಂತೆ ಎಚ್ಚರ ವಹಿಸಬೇಕು. ರಾಷ್ಟ್ರ ಹಾಗೂ ರಾಜ್ಯದ ಸಂಸ್ಕೃತಿ ಪರಂಪರೆ ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು