ಗುರುವಾರ , ಸೆಪ್ಟೆಂಬರ್ 23, 2021
21 °C

ತುಮಕೂರು: ಸದಾಶಿವ ವರದಿ ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲೇ ಮಂಡಿಸಿ, ಜಾರಿಗೆ ತರುವಂತೆ ಆಗ್ರಹಿಸಿ ‘ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವ ಮೂಲಕ ಒಳಮೀಸಲಾತಿ ಕಲ್ಪಿಸಬೇಕು ಎಂದು ಸಮಿತಿ ಮುಖಂಡರು ಒತ್ತಾಯಿಸಿದರು.

ನ್ಯಾ.ಎ.ಜೆ.ಸದಾಶಿವ ನೇತೃತ್ವದಲ್ಲಿ ಆಯೋಗ ನೇಮಕಮಾಡಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ₹11 ಕೋಟಿ ಹಣ ನೀಡಿದ್ದರು. ಆಯೋಗ 2011ರಲ್ಲೇ ವರದಿ ನೀಡಿದ್ದರೂ ಈವರೆಗೂ ಸದನದಲ್ಲಿ ಮಂಡಿಸಿ ಚರ್ಚಿಸದೆ, ನಿರ್ಲಕ್ಷ್ಯ ಮಾಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಪಾವಗಡ ಶ್ರೀರಾಮ್ ಆರೋಪಿಸಿದರು.

ಆಯೋಗದ ವರದಿಯನ್ನು ಕಡೆಗಣಿಸಿದ ಕಾಂಗ್ರೆಸ್ ಪಕ್ಷವನ್ನು ಮಾದಿಗ ಸಮುದಾಯ ಕೈಬಿಟ್ಟದ್ದು, ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸರ್ಕಾರವೂ ನಿರ್ಲಕ್ಷ್ಯ ಮುಂದುವರೆಸಿದರೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಎರಡು ದಶಕಗಳ ಹೋರಾಟವನ್ನು ಪರಿಗಣಿಸಿ ಕೂಡಲೇ ಜಾರಿಗೆ ತರಬೇಕು. ಒಳಮೀಸಲಾತಿ ಜಾರಿಯಿಂದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮುಖಂಡ ವೈ.ಎಚ್.ಹುಚ್ಚಯ್ಯ, ‘ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಹಲವಾರು ರೀತಿಯ ಹೋರಾಟ ನಡೆಸಿದ್ದರೂ ಕೇವಲ ಭರವಸೆ ನೀಡಿ ಕಾಲಹರಣ ಮಾಡಲಾಗುತ್ತಿದೆ. ನಮ್ಮ ಹೋರಾಟಕ್ಕೂ ಒಂದು ತಾಳ್ಮೆ ಇದೆ. ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ತವಕಿಸುತ್ತಿರುವ ಮಾದಿಗ ಸಮುದಾಯಕ್ಕೆ ಒಳಮೀಸಲಾತಿಯೊಂದೇ ಪರಿಹಾರವಾಗಿದೆ’ ಎಂದು ತಿಳಿಸಿದರು.

ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಆಟೊ ಶಿವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ಸಾಗರ್, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಮುಖಂಡರಾದ ಸೊಗಡು ವೆಂಟಕೇಶ್, ಚಿಕ್ಕಹಳ್ಳಿ ಮಂಜುನಾಥ್, ಸೋರೆಕುಂಟೆ ಯೋಗೀಶ್, ಗುಬ್ಬಿ ವಿಜಯಮ್ಮ, ಮಹಾಲಕ್ಷ್ಮಮ್ಮ, ಗಂಗರಾಜು, ಕುರಿಪಾಳ್ಯ ಕೆಂಪರಾಜು, ಬುಗುಡನಹಳ್ಳಿ ಶಿವರಾಜ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು