ಬುಧವಾರ, ಆಗಸ್ಟ್ 10, 2022
23 °C
ಶಿರಾ ವಿಧಾನಸಭೆ ಉಪಚುನಾವಣೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಜೆಡಿಎಸ್‌ ಕಸರತ್ತು

ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಕಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ಗ್ರಾಮೀಣ ಪ್ರದೇಶದಲ್ಲಿ ವಿಧಾನಸಭೆ ಉಪಚುನಾವಣೆ ಕಾವು ಹೆಚ್ಚುತ್ತಿದ್ದು, ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಸ್ಥಾನವನ್ನು ಪಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸಿವೆ. ಜೆಡಿಎಸ್‌ನಲ್ಲಿ ಚಟುವಟಿಕೆಗಳು ಪ್ರಾರಂಭವಾಗಬೇಕಾಗಿದೆ.

ಕಾಂಗ್ರೆಸ್‌ನಿಂದ ಟಿ.ಬಿ.ಜಯಚಂದ್ರ ಅಭ್ಯರ್ಥಿಯಾಗಿದ್ದು, ಈಗಾಗಲೇ ಶಿರಾದಲ್ಲಿ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಚುನಾವಣೆ ಪ್ರಚಾರ ಪ್ರಾರಂಭಿಸಿದ್ದಾರೆ. ಜತೆಗೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ಹುರುಪು ತುಂಬಿದ್ದಾರೆ.

ಬಿಜೆಪಿಯಲ್ಲಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಜತೆ ಸೇರಿ ಕ್ಷೇತ್ರದಲ್ಲಿ 15 ದಿನಗಳಿಂದ ಸಂಚರಿಸುವ ಮೂಲಕ ಬೂತ್ ಕಮಿಟಿಗಳನ್ನು ಮಾಡಿ ಕಾರ್ಯಕರ್ತರಲ್ಲಿ ಚೈತನ್ಯ ಮೂಡಿಸುತ್ತಿದ್ದಾರೆ.

ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್, ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಇದುವರೆಗೂ ಬೂತ್ ಕಮಿಟಿ ಸಭೆಗಳಲ್ಲಿ ಭಾಗವಹಿಸದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಶಿರಾ ಕ್ಷೇತ್ರದಿಂದ 80 ಸಾವಿರ ಮತಗಳನ್ನು ನೀಡಿದರೂ ಅವರು ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ಕೇವಲ ಎರಡು ದಿನ ಮಾತ್ರ ಬೂತ್ ಸಮಿತಿ ರಚನೆಯಲ್ಲಿ ಭಾಗವಹಿಸಿದ್ದರು. ಮಿನಿವಿಧಾನಸೌಧದ ಉದ್ಘಾಟನೆ ಕಾರ್ಯಕ್ರಮಕ್ಕೂ ಗೈರು ಹಾಜರಾಗಿದ್ದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಜೆಡಿಎಸ್‌ನಲ್ಲಿ ಇನ್ನು ಚಟುವಟಿಕೆಗಳು ಪ್ರಾರಂಭವಾಗಬೇಕಾಗಿದೆ. ಎರಡು ದಿನದಿಂದ ಸತ್ಯನಾರಾಯಣ ಪುತ್ರ ಬಿ.ಎಸ್.ಸತ್ಯಪ್ರಕಾಶ್ ಕೆಲವು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ.

ಚುನಾವಣೆ ಆಕಾಂಕ್ಷಿಯಾಗಿರುವ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ಕಲ್ಕೆರೆ ರವಿಕುಮಾರ್, ಸಿ.ಆರ್.ಉಮೇಶ್ ಪ್ರತ್ಯೇಕವಾಗಿ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ. ಇದು ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದ್ದು, ಮುಂದೆ ಯಾರಿಗಾದರೂ ಟಿಕೆಟ್ ನೀಡಿದರೆ ಒಗ್ಗಟ್ಟಿನಿಂದ ಕೆಲಸ ಮಾಡುವರೇ ಎನ್ನುವ ಪ್ರಶ್ನೆ ಮೂಡುತ್ತಿದೆ.

ಬಿಜೆಪಿ, ಜೆಡಿಎಸ್‌ನಲ್ಲಿ ಅಭ್ಯರ್ಥಿಯ ಆಯ್ಕೆಯಲ್ಲಿ ಗೊಂದಲಗಳು ಮುಂದುವರಿದಿವೆ. ಚುನಾವಣೆ ದಿನಾಂಕ ಪ್ರಕಟವಾಗಿ ನಾಮಪತ್ರ ಸಲ್ಲಿಸುವ ಕೊನೆಯ ದಿನದವರೆಗೂ ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.