ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ– ಕೇಂದ್ರ ಸರ್ಕಾರ ಜಂಟಿ ಖಾತೆ ತೆರೆದರಷ್ಟೇ ಬರದ ನೆರವು: ಶೋಭಾ ಕರಂದ್ಲಾಜೆ

Published 24 ಜನವರಿ 2024, 10:23 IST
Last Updated 24 ಜನವರಿ 2024, 10:23 IST
ಅಕ್ಷರ ಗಾತ್ರ

ತುಮಕೂರು: ಬರ ಪರಿಹಾರದ ನೆರವು ಬೇಕಾದರೆ ರಾಜ್ಯ– ಕೇಂದ್ರ ಸರ್ಕಾರದ ಹೆಸರಿನಲ್ಲಿ ಜಂಟಿಯಾಗಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು. ಖಾತೆ ತೆರೆದ ತಕ್ಷಣವೇ ಕೇಂದ್ರದಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದ ಎಪಿಎಂಸಿಯಲ್ಲಿ ಬುಧವಾರ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಯಾಗಿಲ್ಲ. ಪ್ರಧಾನಿ ಮೇಲೆ ಒತ್ತಡ ತಂದು ನೆರವು ಕೊಡಿಸಬೇಕು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಒತ್ತಾಯಕ್ಕೆ ಈ ರೀತಿ ಸೂಚನೆ ನೀಡಿದರು.

ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಯಾಗುತ್ತಿರುವ ಯಾವುದೇ ಯೋಜನೆಗಳಲ್ಲಿ ಅನುದಾನ ಸಿಗಬೇಕಾದರೆ ಇನ್ನು ಮುಂದೆ ಜಂಟಿ ಖಾತೆ ತೆರೆಯುವುದು ಕಡ್ಡಾಯ. ಈ ಬಗ್ಗೆ ನೀತಿ ಆಯೋಗ ಸ್ಪಷ್ಟವಾಗಿ ಸೂಚನೆ ನೀಡಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೂ ಸಾಕಷ್ಟು ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಹಣ ನೀಡುವುದಿಲ್ಲ. ಕೇಂದ್ರದ ಹಣ ವೆಚ್ಚವಾಗಿದ್ದರೂ ಹಣ ಕೊಡದೆ ರಾಜ್ಯ ಸತಾಯಿಸುತ್ತದೆ. ಇದರಿಂದ ಯೋಜನೆ ಜಾರಿ ಮಾಡುವುದು ಕಷ್ಟಕರವಾಗುತ್ತದೆ. ಹಾಗಾಗಿ ಜಂಟಿ ಖಾತೆ ಕಡ್ಡಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಭಿವೃದ್ಧಿ, ಅನುದಾನ ನೀಡುವ ವಿಚಾರದಲ್ಲಿ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡುತ್ತಿಲ್ಲ. ಇದರಲ್ಲಿ ರಾಜಕೀಯ ಬೆರೆಸುತ್ತಿಲ್ಲ. ಎಲ್ಲಾ ರಾಜ್ಯಗಳು ಅಭಿವೃದ್ಧಿ ಹೊಂದಿದರೆ, ದೇಶ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಹಾಗಾಗಿ ರಾಜ್ಯಕ್ಕೆ ಯಾವುದೇ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಖಾದ್ಯ ತೈಲ ಆಮದು ಅನಿವಾರ್ಯ: ವಿದೇಶಗಳಿಂದ ಖಾದ್ಯ ತೈಲ ಆಮದು ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ದೇಶದ ಒಟ್ಟು ಖಾದ್ಯ ತೈಲ ಬೇಡಿಕೆಯಲ್ಲಿ ಶೇ 20ರಷ್ಟು ನಮ್ಮಲ್ಲಿ ಉತ್ಪಾದನೆ ಆಗುತ್ತಿದೆ. ಶೇ 80ರಷ್ಟು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಖಾದ್ಯ ತೈಲ ಆಮದು ನಿಲ್ಲಿಸುವಂತೆ ರೈತರು, ಸಚಿವರು ಮಾಡಿದ ಒತ್ತಾಯಕ್ಕೆ ಸ್ಪಂದಿಸಿದ ಅವರು, ‘ದೇಶದಲ್ಲಿ ಹಿಂದೆ 12.50 ಲಕ್ಷ ಎಕರೆ ಪ್ರದೇಶದಲ್ಲಿ ಎಣ್ಣೆ ಕಾಳು ಬೆಳೆಯಲಾಗುತಿತ್ತು. ಈಗ 3.50 ಲಕ್ಷ ಎಕರೆಗಳಿಗೆ ಕುಸಿದಿದೆ. ಬೇಡಿಕೆ ಪೂರೈಸಲು ಆಮದು ಅನಿವಾರ್ಯವಾಗಿದೆ. ಉತ್ಪಾದನೆ ಹೆಚ್ಚಾದರೆ ಆಮದು ಕಡಿಮೆ ಮಾಡಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT