–ಮೈಲಾರಿ ಲಿಂಗಪ್ಪ
ತುಮಕೂರು: ಸರ್ಕಾರದಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಕಳೆದ ಎರಡು ವರ್ಷದಿಂದ ಹಾಸಿಗೆ ಪೂರೈಕೆಯಾಗಿಲ್ಲ. ಹಾಸಿಗೆ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾರ್ಚ್‌ನಲ್ಲಿಯೇ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 100 ಹಾಸ್ಟೆಲ್‌ಗಳು ನಡೆಯುತ್ತಿವೆ. ಇದರಲ್ಲಿ 9 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕನಿಷ್ಠ 6 ಸಾವಿರ ಹಾಸಿಗೆಗಳ ಅವಶ್ಯಕತೆ ಇದ್ದು, ಸರ್ಕಾರ ಈ ಬಗ್ಗೆ ಇದುವರೆಗೆ ಗಮನ ಹರಿಸಿಲ್ಲ. ಎರಡು ವರ್ಷದ ಹಿಂದೆ ಪೂರೈಕೆಯಾದ ಹಾಸಿಗೆಗಳನ್ನು ವಿದ್ಯಾರ್ಥಿಗಳು ಬಳಸುತ್ತಿದ್ದಾರೆ.
‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳಲ್ಲಿ ಸೋನಾ ಮಸೂರಿ ಅಕ್ಕಿಯಿಂದ ಅನ್ನ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡುವಂತೆ’ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಹಾಸ್ಟೆಲ್‌ಗಳ ಪರಿಸ್ಥಿತಿ ಇದಕ್ಕೆ ಭಿನ್ನವಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳೇ ಸಿಗುತ್ತಿಲ್ಲ. ಹಳೆಯ ಹಾಸಿಗೆಗಳಲ್ಲಿಯೇ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ವಿದ್ಯಾರ್ಥಿ ನಿಲಯಗಳಲ್ಲೂ ಇದೇ ಪರಿಸ್ಥಿತಿ ಇದೆ. ಸಮಸ್ಯೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆ ಇದೆ. ಜಿಲ್ಲೆಯ 113 ಒಬಿಸಿ ಹಾಸ್ಟೆಲ್‌ಗಳಲ್ಲಿ 10,461 ವಿದ್ಯಾರ್ಥಿಗಳಿದ್ದಾರೆ. ಎಲ್ಲ ಹಾಸ್ಟೆಲ್‌ಗಳಿಗೆ ಹಾಸಿಗೆ, ದಿಂಬು ನೀಡುವ ಕೆಲಸ ಈಗಾಗಲೇ ಆರಂಭವಾಗಿದೆ.
ತುಮಕೂರು ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ದಿನೇ ದಿನೇ ಬೆಳವಣಿಗೆಯಾಗುತ್ತಿದೆ. ಶಿಕ್ಷಣಕ್ಕಾಗಿ ಇಲ್ಲಿಗೆ ಆಗಮಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದರೆ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಹಾಸ್ಟೆಲ್‌ಗಳು ಸಿಗುತ್ತಿಲ್ಲ. ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಸಿಗದೆ ಪರದಾಡುತ್ತಿದ್ದಾರೆ. ದೂರ ದೂರುಗಳಿಂದ ಬಂದವರು ಬಾಡಿಗೆ ಕಟ್ಟಡದಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಹಲವು ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಸರಿಪಡಿಸುವ ಕೆಲಸ ಮಾಡಬೇಕಿದೆ. ಶೌಚಾಲಯಗಳು ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಸರಿಯಾದ ಆಹಾರ ನೀಡುತ್ತಿಲ್ಲ. ಮೆನು ಪ್ರಕಾರ ಅಡುಗೆ ಮಾಡುತ್ತಿಲ್ಲ, ಆಹಾರ ರುಚಿಯಾಗಿರುವುದಿಲ್ಲ ಎಂಬ ಆರೋಪಗಳು ಆಗಾಗ ವಿದ್ಯಾರ್ಥಿ ವಲಯದಿಂದ ಕೇಳಿ ಬರುತ್ತಿವೆ.
ಹಾಸಿಗೆ ಪೂರೈಕೆಗೆ ಸಂಬಂಧಪಟ್ಟಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಸ್ಟೆಲ್‌ಗಳಲ್ಲಿ ಊಟದ ಸಮಸ್ಯೆ ಇಲ್ಲ. ಮೆನು ಪ್ರಕಾರ ಅಡುಗೆ ಮಾಡಲಾಗುತ್ತಿದೆ.– ಕೃಷ್ಣಪ್ಪ, ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಇದೆ. ತುಮಕೂರು ನಗರ ತಿಪಟೂರಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು. ಇದರಿಂದ ತುಂಬಾ ಜನರಿಗೆ ಅನುಕೂಲವಾಗಲಿದೆ.– ಎಸ್.ಆರ್.ಗಂಗಪ್ಪ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ
41 ಹಾಸ್ಟೆಲ್‌ಗಳು ಬಾಡಿಗೆ ಕಟ್ಟಡದಲ್ಲಿ ಜಿಲ್ಲೆಯಲ್ಲಿ ಹಲವು ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ 29 ಹಾಸ್ಟೆಲ್ ಸಮಾಜ ಕಲ್ಯಾಣ ಇಲಾಖೆ 12 ವಿದ್ಯಾರ್ಥಿ ನಿಲಯಗಳು ಸೇರಿದಂತೆ 41 ಹಾಸ್ಟೆಲ್‌ಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಸರ್ಕಾರದಿಂದ ಜಾಗ ಮಂಜೂರು ಮಾಡಿ ಸ್ವಂತ ಕಟ್ಟಡಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆಯೂ ಸರ್ಕಾರದ ಗಮನ ಹರಿಸಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.