ಭಾನುವಾರ, ಜೂನ್ 26, 2022
21 °C

ಕುರುಬರಿಗೆ ಎಸ್‌ಟಿ ಮೀಸಲು: ಸಿದ್ದರಾಮಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಕೊಡಬೇಕು. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರುಬ ಸಮುದಾಯಕ್ಕೆ ಕರೆ ನೀಡಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕುರುಬರ ಜಿಲ್ಲಾ ಮಟ್ಟದ ಜಾಗೃತಿ ಸಭೆಯಲ್ಲಿ ಮಾತನಾಡಿ, ‘ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಬೇಕಾದ ಕುಲಶಾಸ್ತ್ರೀಯ ಅಧ್ಯಯನ ನಡೆಸುವ ಜವಾಬ್ದಾರಿಯನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ವಹಿಸಲಾಗಿದೆ. ಇದಕ್ಕೆ ಬೇಕಾದ ಹಣವನ್ನು ನೀಡಲಾಗಿದೆ. ಆದರೆ ಯಾವುದೇ ಪ್ರಗತಿಯಾಗಿಲ್ಲ. ಈವರೆಗೂ ವರದಿ ಸಿದ್ಧವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮುದಾಯದ ನಾಯಕರು ಎಂದು ಹೇಳಿಕೊಳ್ಳುವ ಕೆ.ಎಸ್.ಈಶ್ವರಪ್ಪ ಅವರ ಬಿಜೆಪಿ ಪಕ್ಷವೇ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿ ಇದೆ. ಕುಲಶಾಸ್ತ್ರೀಯ ಅಧ್ಯಯನ ವರದಿ ಪಡೆದು, ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ಮೀಸಲಾತಿ ಕೊಡಿಸಲು ಸಾಧ್ಯವಾಗಿಲ್ಲ. ನಿಮಗೆ ಕುರುಬರ ಬಗ್ಗೆ ಕಾಳಜಿ ಇದ್ದರೆ ಮೊದಲು ಎಸ್‌ಟಿ ಮೀಸಲಾತಿ ಕೊಡಿಸಿ. ನಿಮ್ಮ ಕೈಯಲ್ಲೇ ಅಧಿಕಾರವಿದ್ದು, ಬೂಟಾಟಿಕೆ, ನಾಟಕ ಬಿಟ್ಟು ಸಾಮರ್ಥ್ಯ ತೋರಿಸಿ ಎಂದು ಈಶ್ವರಪ್ಪ ಅವರಿಗೆ ಸವಾಲು ಹಾಕಿದರು.

ಬೀದರ್, ಕಲಬುರಗಿ, ಯಾದಗಿರಿ ಭಾಗದ ಜಿಲ್ಲೆಗಳಲ್ಲಿರುವ ಕುರುಬರ ಕೆಲ ಪಂಗಡಗಳನ್ನು ಗೊಂಡ ಎಂದು ಕರೆಯಲಾಗುತ್ತಿದ್ದು, ಈ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರೂ ಈವರೆಗೂ ನಿರ್ಧಾರ ಕೈಗೊಂಡಿಲ್ಲ. ಇದರಿಂದ ಆ ಭಾಗದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಜಾತಿ ಗಣತಿಯ ವರದಿಯನ್ನು ಸರ್ಕಾರ ತಕ್ಷಣ ಸ್ವೀಕರಿಸಿ, ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ಕಲ್ಪಿಸಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸರಿಯಾಗಿ ಮನವರಿಕೆ ಮಾಡಿಕೊಡಬೇಕು. ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಬಾರದು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು