ತುಮಕೂರು: ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಹೊನ್ನಮ್ಮಗವಿ ಮಠದ ರಜತ ಮಹೋತ್ಸವ ಮಾರ್ಚ್ 26ರಂದು ನಡೆಯಲಿದೆ. 25 ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮಠದ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನೆ, ಪದವಿ ಪೂರ್ವ ವಿಜ್ಞಾನ ವಿಭಾಗ ಕಾಲೇಜಿನ ಕಟ್ಟಡದ ಶಿಲಾನ್ಯಾಸ, ವಿದ್ಯಾರ್ಥಿ ನಿಲಯ ಶಿಲಾನ್ಯಾಸ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಹೊನ್ನಮ್ಮಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಇಲ್ಲಿ ಮಂಗಳವಾರ ತಿಳಿಸಿದರು.
ಮಠದಲ್ಲಿ ಪ್ರಾಥಮಿಕ ಹಂತದಿಂದ ಪದವಿಯ ವರೆಗೆ ಶಿಕ್ಷಣ ನೀಡಲಾಗುತ್ತಿದೆ. 170 ವಿದ್ಯಾರ್ಥಿಗಳು ಮಠದಲ್ಲಿ ಆಶ್ರಯ ಪಡೆದಿದ್ದಾರೆ. 400 ವಿದ್ಯಾರ್ಥಿಗಳು ಉಳಿದುಕೊಳ್ಳಲು ಆಗುವಷ್ಟು ವಿದ್ಯಾರ್ಥಿ ನಿಲಯ ಉದ್ಘಾಟನೆಗೆ ಸಿದ್ಧಗೊಂಡಿದೆ. ಮಠದಲ್ಲಿಯೇ ಗೋಶಾಲೆ ಆರಂಭಿಸಿದ್ದು, 80 ಹಸುಗಳನ್ನು ರಕ್ಷಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹಿರಿಯರಿಗೆ ಸನ್ಮಾನ, 5 ಸ್ತ್ರೀ ಶಕ್ತಿ ಸಂಘಗಳಿಂದ ತಯಾರಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ದೇಸಿ ಕ್ರೀಡೆಗಳಾದ ಕಬಡ್ಡಿ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗುತ್ತದೆ. ಅಂಗವಿಕಲರಿಗೆ ವ್ಹೀಲ್‌ಚೇರ್ ವಿತರಣೆ ಒಳಗೊಂಡಂತೆ ಹಲವು ಕಾರ್ಯಕ್ರಮಗಳು ಜರುಗಲಿವೆ ಎಂದರು.
ವೀರಶೈವ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಬಿ.ಶೇಖರ್, ‘ರಜತ ಮಹೋತ್ಸವದ ಪ್ರಯುಕ್ತ ಹಲವು ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಮಠದ ಪರಂಪರೆ, ಬೆಳೆದು ಬಂದ ಹಾದಿಯ ಬಗ್ಗೆ ತಿಳಿಸುವ ಕೆಲಸವಾಗಲಿದೆ’ ಎಂದು ಹೇಳಿದರು.
ವೀರಶೈವ ಸಮಾಜದ ಜಿಲ್ಲಾ ಘಟಕದ ಉಪಾಧ್ಯಕ್ಷ ಎಸ್.ಜಿ.ಚಂದ್ರಮೌಳಿ, ಪದಾಧಿಕಾರಿಗಳಾದ ರಕ್ಷಿತ್, ಜಗದೀಶ್, ವಿರೂಪಾಕ್ಷಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.