ಮಂಗಳವಾರ, ಸೆಪ್ಟೆಂಬರ್ 21, 2021
29 °C
ಸ್ಮಾರ್ಟ್‌ಸಿಟಿ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ. ಆ ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಬೇಕು. ಈಗ ಕೈಗೊಂಡಿರುವ ರಸ್ತೆ ಕಾಮಗಾರಿಗಳಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಫಲಕಗಳನ್ನು ಅಳವಡಿಸಬೇಕು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಲಭ್ಯವಿರುವ ಜಾಗದ ಆಧಾರದ ಮೇಲೆ ರಸ್ತೆ ಮತ್ತು ಫುಟ್‌ಪಾತ್ ನಿರ್ಮಿಸಬೇಕು. ನಗರದಲ್ಲಿ ಏಕಕಾಲಕ್ಕೆ ರಸ್ತೆಗಳನ್ನು ಅಗೆದು ಬಿಟ್ಟರೆ ಹೇಗೆ? ರಸ್ತೆ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.

ರಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗಿರುವ ತೊಡಕುಗಳನ್ನು ಬೇಗ ನಿವಾರಿಸಿಕೊಳ್ಳಬೇಕು. ವಿದ್ಯುತ್ ಕಂಬಗಳ ಸ್ಥಳಾಂತರ, ಅಳವಡಿಕೆ, ರಸ್ತೆ ವಿಭಜಕ ನಿರ್ಮಾಣ ಮತ್ತಿತರ ಕೆಲಸಗಳನ್ನು ಶೀಘ್ರ ಕೈಗೊಳ್ಳಬೇಕು. ನಗರದ ಕೊಳಚೆ ನೀರನ್ನು ಪುನರ್ ಬಳಕೆ ಮಾಡಲು ಇಸ್ರೇಲ್ ಸಂಸ್ಥೆ ಮುಂದೆ ಬಂದಿದೆ. ಇದನ್ನು ಬಳಸಿಕೊಂಡು 20–25 ಎಂಎಲ್‍ಡಿ ನೀರನ್ನು ಶುದ್ಧೀಕರಿಸಬಹುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಸ್.ಬಸವರಾಜ್, ನಗರ ಒಳಚರಂಡಿ ನೀರಿನಿಂದ ಮೆಳೆಕೋಟೆ ಸೇರಿದಂತೆ ನಗರದ ಸುತ್ತಮುತ್ತಲಿನ ಹಳ್ಳಿಗಳಿಗೆ ತೊಂದರೆ ಆಗಿದೆ. ಈ ಯೋಜನೆಯಿಂದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಫರೀದಾಬೇಗಂ, ಉಪಮೇಯರ್ ಶಶಿಕಲಾ, ಟೂಡಾ ಅಧ್ಯಕ್ಷ ನಾಗೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ರಂಗಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು