ಸೋಮವಾರ, ಮೇ 23, 2022
28 °C
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಅಧ್ಯಕ್ಷೆ ಲತಾ ಸೂಚನೆ

ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಆಯಾ ‌‌ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಖರ್ಚು ಮಾಡಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. 

ಅನುದಾನ ವ್ಯರ್ಥ ಮಾಡಬಾರದು. ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಕೈಗೊಂಡು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಸದಸ್ಯ ಕೆಂಪಚೌಡಯ್ಯ, ಕಳೆದ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ. ಈ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಇಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.

‌ಸದಸ್ಯ ರಾಮಚಂದ್ರಯ್ಯ, ರಾಗಿ ಖರೀದಿ ಕೇಂದ್ರಗಳಲ್ಲಿ ವರ್ತಕರು ರಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳಿವೆ. ರೈತರಿಗೆ ಅನ್ಯಾಯವಾಗುತ್ತಿದೆ ಎಂದರು. ಆಗ ಅಧಿಕಾರಿಗಳು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದರು.

ರೈತರಿಗೆ ಉಪಯೋಗವಾಗುವಂತೆ ಸಾವಯವ ಕೃಷಿ ಬಗ್ಗೆ ತರಬೇತಿ ನೀಡಬೇಕು. ಬೆಳೆ ವಿಮೆ ಮಾಡಿಸುವಂತೆ ತಿಳಿಸಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಹೋಬಳಿ, ಗ್ರಾಮ ಪಂಚಾಯಿತಿ ಹಂತದಲ್ಲಿ ಕೈಪಿಡಿ ರೂಪಿಸಿ ಅಥವಾ ಭಿತ್ತಿಪತ್ರಗಳ ಮೂಲಕ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಕೆಂಪಚೌಡಯ್ಯ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೇಸಿಗೆ ಸಮೀಪಿಸುತ್ತಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮೇವು ದಾಸ್ತಾನು ಮಾಡಬೇಕು. ಶುದ್ಧ ಕುಡಿಯುವ ನೀರು ಘಟಕಗಳು ಕಾರ್ಯನಿರ್ವಹಿಸದೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸದಸ್ಯರು ಸೂಚಿಸಿದರು.

ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ, ಮುಖ್ಯ ಯೋಜನಾಧಿಕಾರಿ ಬಾಲರಾಜ್, ಉಪಕಾರ್ಯದರ್ಶಿ ಕೃಷ್ಣಮೂರ್ತಿ, ರಮೇಶ್ ಸೇರಿದಂತೆ ಜಿಲ್ಲಾಮಟ್ಟದ
ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು