ಶನಿವಾರ, ಜುಲೈ 24, 2021
27 °C
ಜಿಲ್ಲಾ ಕಾಂಗ್ರೆಸ್ ನಿಯೋಗದಿಂದ ಶಿಕ್ಷಣ ಇಲಾಖೆ ಉಪನಿರ್ದೇಶಕರ ಭೇಟಿ

ಎಸ್ಸೆಸ್ಸೆಲ್ಸಿ ಪರೀಕ್ಷೆ; ಮುಂಜಾಗ್ರತೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲೆಯಲ್ಲಿ ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆ ಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರ ನಿಯೋಗವು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿತು.

ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಮಾತನಾಡಿ, ‘ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಒಂದು ರೀತಿಯ ಭಯದ ವಾತಾವರಣ ಇದೆ. ಹೀಗಾಗಿ ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ವಿದ್ಯಾರ್ಥಿ, ಪೋಷಕರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೆ ನಮ್ಮನ್ನು ಹಾಕಲಾಗಿದೆ. ಬಸ್ ಸಮಸ್ಯೆ ಇದೆ. ಆದ್ದರಿಂದ ಊರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಕೆಲವು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳ ಶುಲ್ಕವನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಬೇಕು. ಇದರಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶಿಕ್ಷಕರಿಗೆ ವೇತನ ನೀಡಲು ಅನುಕೂಲವಾಗುತ್ತದೆ ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ, ‘ಜಿಲ್ಲೆಯ 256 ಖಾಸಗಿ ಶಾಲೆಗಳಿಗೆ 2019–2020ನೇ ಸಾಲಿನ ಆರ್‌ಟಿಇ ಹಣ ಮೊದಲ ಕಂತು ₹5.86 ಕೋಟಿ ಬಿಡುಗೆಯಾಗಿದೆ. 10 ದಿನದ ಒಳಗೆ ಆರ್‌ಟಿಇ ಅಡಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿರುವ ಎಲ್ಲ ಖಾಸಗಿ ಶಾಲೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು’ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತಾಧಿಕಾರಿ ರಂಗದಾಸಪ್ಪ, ‘ವಿದ್ಯಾರ್ಥಿ, ಪೋಷಕರಿಗೆ ಆರೋಗ್ಯ ಇಲಾಖೆ ಸಹಕಾರದಲ್ಲಿ ಕರಪತ್ರ ತಲುಪಿಸಿ ಆತ್ಮಸ್ಥೈರ್ಯ ತುಂಬಲು ಕ್ರಮ ಕೈಗೊಳ್ಳಲಾಗುತ್ತಿದೆ. ಮನೆಯಿಂದಲೇ ಊಟದ ಬಾಕ್ಸ್, ಬಿಸಿನೀರು ತರಬೇಕು. ನೀರು ತರದ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ತಿಳಿಸಿದರು.

ಇದುವರೆಗೂ 446 ವಿದ್ಯಾರ್ಥಿಗಳು ಜಿಲ್ಲೆಯಿಂದ ಹೊರಗೆ ಹೋಗಿದ್ದು, 203 ಮಂದಿ ವಾಪಸ್ ಬಂದಿದ್ದಾರೆ ಎಂದರು.

ಜಿ.ಪಂ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ರೇವಣಸಿದ್ಧಯ್ಯ, ಜಿ.ಎಸ್.ಸೋಮಣ್ಣ, ಟಿ.ಎಸ್.ತರುಣೇಶ್, ಮರಿಚನ್ನಮ್ಮ, ವಾಲೆಚಂದ್ರಯ್ಯ, ಗೋವಿಂದೇಗೌಡ, ಮಂಜುನಾಥ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು