ಗುಬ್ಬಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಶಾಸಕ ಎಸ್.ಆರ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ಹಿತರಕ್ಷಣ ಸಭೆ ನಡೆಯಿತು.
ಈ ಹಿಂದಿನ ಸಭೆಯಲ್ಲಿ ತೀರ್ಮಾನಿಸಿದ್ದ ಕೆಲವು ವಿಷಯಗಳು ಪಾಲನೆಯಾಗದಿರುವ ಬಗ್ಗೆ ಸಭೆ ಆರಂಭದಲ್ಲಿಯೇ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕಿನ ಮೇಳೆಕಲ್ಲಹಳ್ಳಿಯಲ್ಲಿ ಗಂಗಣ್ಣ ಅವರ ಜಮೀನಿನಲ್ಲಿ ಗ್ರಾಮದ ಕೆಲವರು ಅಕ್ರಮವಾಗಿ ಮನೆ ಕಟ್ಟಲು ಮುಂದಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಗಂಗಣ್ಣನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಗಂಗಣ್ಣ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಂತ್ರಸ್ತರು ಈಗಲೂ ಭಯದಲ್ಲಿಯೇ ಬದುಕುವಂತಾಗಿದೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಮೇಳೆಕಲ್ಲಹಳ್ಳಿ ಯೋಗೀಶ್ ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಶಾಸಕರು, ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಈ ವಿಚಾರವನ್ನು ಚರ್ಚಿಸಿ ಕ್ರಮ ಕೈಗೊಳ್ಳುವಂತೆ ತಿಳಿಸುತ್ತೇನೆ ಎಂದು ಭರವಸೆ ನೀಡಿದರು.
ಕೆಲವು ಇಲಾಖೆಗಳಲ್ಲಿ ಅಧಿಕಾರಿಗಳು ಪರಿಶಿಷ್ಟರ ಕೆಲಸಗಳನ್ನು ಮಾಡಿಕೊಡಲು ಸತಾಯಿಸುತ್ತಿದ್ದಾರೆ. ಪರಿಶಿಷ್ಟರ ಕೆಲಸಗಳ ಬಗ್ಗೆ ಅಸಡ್ಡೆ ತೋರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು. ಕರ್ತವ್ಯಲೋಪ ಎಸಗಿದಲ್ಲಿ ಸಂಬಂಧಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪರಿಶಿಷ್ಟರ ಅನುದಾನವನ್ನು ಬೇರೆ ಯಾವುದೇ ಉದ್ದೇಶಕ್ಕೂ ಬಳಸಬಾರದು. ಅಂತಹ ನಿದರ್ಶನ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಸ್ಮಶಾನ ಜಾಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಚರ್ಚಿತವಾಗುವ ಎಲ್ಲ ವಿಷಯಗಳನ್ನು ಸಂಬಂಧಿಸಿದ ಅಧಿಕಾರಿಗಳು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಎಚ್ಚರಿಸಿದರು.
ತಹಶೀಲ್ದಾರ್ ಆರತಿ ಬಿ. ಮಾತನಾಡಿ, ಪರಿಶಿಷ್ಟರ ಹಿತ ರಕ್ಷಣೆಗೆ ತಾಲ್ಲೂಕು ಆಡಳಿತ ಬದ್ಧವಾಗಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಪರಿಶಿಷ್ಟರು ಗಮನಕ್ಕೆ ತಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಸ್ಪಂದಿಸಿ ತಾಲ್ಲೂಕಿನ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.