ಶುಕ್ರವಾರ, ಸೆಪ್ಟೆಂಬರ್ 20, 2019
21 °C

ಸ್ವಯಂಪ್ರೇರಿತ ಸ್ವಚ್ಛತಾ ಮನೋಭಾವ ಬೆಳೆಸಿಕೊಳ್ಳಿ: ನೋಡಲ್ ಅಧಿಕಾರಿ ಸತ್ಯನಾರಾಯಣ್

Published:
Updated:
Prajavani

ತುಮಕೂರು: ಸ್ವಯಂಪ್ರೇರಿತರಾಗಿ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸ್ವಚ್ಛ ಭಾರತ್ ಅಭಿಯಾನ ಜಿಲ್ಲಾ ನೋಡಲ್ ಅಧಿಕಾರಿ ಸತ್ಯನಾರಾಯಣ್ ತಿಳಿಸಿದರು.

ಭಾರತ ಸರ್ಕಾರದ ಬಳ್ಳಾರಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾ ಪಂಚಾಯಿತಿ, ಶಿರಾ ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಗ್ರಾಮಪಂಚಾಯಿತಿ ಸಹಯೋಗದಲ್ಲಿ ಇತ್ತೀಚೆಗೆ ಬುಕ್ಕಾಪಟ್ಟಣದಲ್ಲಿ ನಡೆದ ‘ಸ್ವಚ್ಛತಾ ಕ್ರಿಯಾ ಯೋಜನೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಗ್ರಾಮಗಳ ಸ್ವಚ್ಛತೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ನಮ್ಮ ಮನಸ್ಥಿತಿಯಿಂದ ಗ್ರಾಮಗಳಲ್ಲಿ ನಿರೀಕ್ಷಿತ ಮಟ್ಟದ ಸ್ವಚ್ಛತೆ ಕಾಣುತ್ತಿಲ್ಲ. ಸ್ವಯಂಪ್ರೇರಿತರಾಗಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಲ್ಲಿ ಸ್ವಚ್ಛತೆಯ ಪರಿಕಲ್ಪನೆ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಸಿ.ಪ್ರಕಾಶ್, ಕೇಂದ್ರ ಸರ್ಕಾರದ ಸ್ವಚ್ಛತಾ ಕ್ರಿಯಾಯೋಜನೆಯಡಿ ಎಲ್ಲ ಗ್ರಾಮಪಂಚಾಯಿತಿಗಳಿಗೆ ಸ್ವಚ್ಛತಾ ಪರಿಕರಗಳನ್ನು ಒದಗಿಸಲಾಗುತ್ತಿದೆ. ಗ್ರಾಮೀಣ ಜನರು ಪರಿಕರಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಪ್ಪ, ಶೌಚಾಲಯದ ಪ್ರಾಮುಖ್ಯ ಹಾಗೂ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಡಾ.ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ರಾಮಪಂಚಾಯಿತಿ ಅಧ್ಯಕ್ಷೆ ಗೌರಿಬಾಯಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯೆ ರಶ್ಮಿ ರಂಗನಾಥ್, ಉಪಾಧ್ಯಕ್ಷೆ ಯಶೋದಮ್ಮ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಗಾಯತ್ರಿ, ಗ್ರಾಮಪಂಚಾಯಿತಿ ಸದಸ್ಯರಾದ ಬಿ.ದಿವಾಕರ್, ಬಸವರಾಜು, ಜಯಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಆರ್.ಮಂಜುನಾಥ್ ಇದ್ದರು.

ಕಾರ್ಯಕ್ರಮದ ಅಂಗವಾಗಿ ಜಾಗೃತಿ ಜಾಥಾ, ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕ್ಷೇತ್ರಪ್ರಚಾರ ಸಹಾಯಕ ಎನ್.ರಾಮಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು.

Post Comments (+)