ಗುಣಮಟ್ಟ ಪರೀಕ್ಷಿಸಿದ ನಂತರವೇ ಟ್ಯಾಂಕರ್ ನೀರು ಪೂರೈಸಿ

ಸೋಮವಾರ, ಮೇ 27, 2019
33 °C
ಬರ ನಿರ್ವಹಣೆ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಆದೇಶ

ಗುಣಮಟ್ಟ ಪರೀಕ್ಷಿಸಿದ ನಂತರವೇ ಟ್ಯಾಂಕರ್ ನೀರು ಪೂರೈಸಿ

Published:
Updated:
Prajavani

ತುಮಕೂರು: ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಮುನ್ನ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ನೀರು ಪೂರೈಕೆ ಮಾಡಿದ ಬಗ್ಗೆ ಚಿತ್ರ ಸಹಿತ ವರದಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್  ಆದೇಶಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

 ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಬೆಳಿಗ್ಗೆ 8 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಪಿಡಿಓಗಳಿಗೆ ನಿರ್ದೇಶನ ನೀಡಿದರು.

ಕೊರಟಗೆರೆ, ಮಧುಗಿರಿ, ಶಿರಾ, ಪಾವಗಡ ತಾಲೂಕಿನ ನೋಡಲ್ ಅಧಿಕಾರಿಗಳು ತಾಲ್ಲೂಕು ಪಂಚಾಯಿತಿಗೆ ಭೇಟಿ ನೀಡಿ, ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ಸ್ವೀಕರಿಸಿರುವ ದೂರುಗಳನ್ನು ಪರಿಶೀಲಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

‘ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಫಲವಾಗಿರುವ ಕೊಳವೆ ಬಾವಿಗಳು ಹಾಗೂ ವಿಫಲವಾಗಿರುವ ಕೊಳವೆ ಬಾವಿಗಳು ಎಷ್ಟು ಎಂಬುದನ್ನು ಪರಿಶೀಲಿಸಿ ತಮಗೆ ವರದಿ ನೀಡಬೇಕು’ ಎಂದು ಸೂಚಿಸಿದರು.

‘ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣವೇ ಸರಿಪಡಿಸಬೇಕು. ಪತ್ರಿಕೆಯಲ್ಲಿ ಪ್ರಕಟವಾಗುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೂಡಲೇ ಬಗೆಹರಿಸಬೇಕು. ಅಲ್ಲದೇ, ಈ ಕುರಿತು ಪತ್ರಿಕೆಗಳಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸಿಇಓ ಸೂಚಿಸಿದರು.

ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ. ‘ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಬಗ್ಗೆ ಸಹಾಯವಾಣಿ ಮೂಲಕ ದೂರು ದಾಖಲಾಗಿದೆ.  ಗ್ರಾಮಗಳಿಗೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು.ಆಯಾ ಗ್ರಾಮ ಪಂಚಾಯಿತಿಗಳ ಪಿಡಿಓ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಎಇಇಗಳು ಸಭೆ ನಡೆಸಿ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಕೆಲವು ಗ್ರಾಮಗಳಲ್ಲಿ ಉಚಿತವಾಗಿ ನೀರು ಪೂರೈಕೆ ಮಾಡುತ್ತಿರುವ ರೈತರು ಹಾಗೂ ಮುಖಂಡರನ್ನು ಗುರುತಿಸಿ ಸನ್ಮಾನ ಮಾಡಬೇಕು’ ಎಂದು ಸಲಹೆ ನೀಡಿದರು.

‘ಕುಡಿಯುವ ನೀರಿಗೆ ಮೊದಲು ಆದ್ಯತೆ ನೀಡಬೇಕು. ಪಾವಗಡ ತಾಲ್ಲೂಕಿನ ವೈ.ಎನ್ ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಪಂಚಾಯಿತಿಯಿಂದ ನೀಡಿರುವ ನೀರಿನ ಸಂಪರ್ಕಗಳಿಗೆ ಅನಧಿಕೃತ ಪೈಪ್ ಹಾಗೂ ಮೋಟರ್ ಅಳವಡಿಸಿಕೊಂಡಿರುವವರು ಒಂದು ವಾರದೊಳಗೆ ತೆರವುಗೊಳಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಕರಪತ್ರಗಳ ಮೂಲಕ ಎಚ್ಚರಿಕೆ ನೀಡಬೇಕು. ತಪ್ಪಿದ್ದಲ್ಲಿ ತಕ್ಷಣ ನೋಟಿಸ್ ನೀಡಿ ದಂಡ ವಿಧಿಸಬೇಕು’ ಎಂದು ಸೂಚಿಸಿದರು.

ಉಪಕಾರ್ಯದರ್ಶಿ ಡಾ.ಪ್ರೇಮಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್,ನೋಡಲ್ ಅಧಿಕಾರಿ, ತಾಲ್ಲೂಕು ಮಟ್ಟದ ಅಧಿಕಾರಿಗಳಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !