ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ: ತಾ.ಪಂ ಸದಸ್ಯರ ಒತ್ತಾಯ

ರಾಗಿ ಖರೀದಿ ಕೇಂದ್ರ ತೆರೆಯಲು ತಾ.ಪಂ ಸದಸ್ಯರ ಒತ್ತಾಯ
Last Updated 10 ಫೆಬ್ರುವರಿ 2021, 4:47 IST
ಅಕ್ಷರ ಗಾತ್ರ

ತುಮಕೂರು: ಹಿರೇಹಳ್ಳಿ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಹೆಚ್ಚಾಗಿದ್ದು, ಕೊಳವೆ ಬಾವಿಗಳೂ ಬತ್ತಿಹೋಗಿವೆ. ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮಂಗಳವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.

ನೀರಿನ ಸಮಸ್ಯೆ ತೀವ್ರವಾಗುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯ ಸುರೇಶ್ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಾ.ಪಂ ಅಧ್ಯಕ್ಷೆ ಕವಿತಾ, ‘ಈಗಾಗಲೇ ಬೇಸಿಗೆ ಆರಂಭವಾಗಿದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಯಾವ ಗ್ರಾಮದಲ್ಲೂ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ, ಸಮಸ್ಯೆ ಬಗೆಹರಿಸಬೇಕು’ ಎಂದು ಸೂಚಿಸಿದರು.

ರಾಗಿ ಖರೀದಿ ಕೇಂದ್ರಗಳು ಇನ್ನೂ ಆರಂಭವಾಗಿಲ್ಲ. ರಾಗಿ ಒಕ್ಕಣೆ ಕೆಲಸ ಮುಗಿದಿದ್ದು, ರಾಗಿ ಮಾರಾಟ ಮಾಡಲು ರೈತರು ಪರದಾಡುತ್ತಿದ್ದಾರೆ. ಎಪಿಎಂಸಿಯಲ್ಲಿಖರೀದಿ ಕೇಂದ್ರ ಆರಂಭಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

ಕೋರಾ ಹೋಬಳಿ ಬೊಮ್ಮನಹಳ್ಳಿ ಶಾಲೆಗೆ ಸೇರಿದ ಜಾಗದಲ್ಲಿ ಸುಮಾರು 1 ಎಕರೆ ಜಮೀನನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ. ಶಾಲೆಯ ಜಾಗ ಎಲ್ಲಿ ಒತ್ತುವರಿಯಾಗಿದೆ ಎಂಬುದೇ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಈ ಬಗ್ಗೆ ಸಾಕಷ್ಟು ಸಲ ಪ್ರಸ್ತಾಪಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯೆ ಕವಿತಾ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.

‘ಇಂದೇ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಒತ್ತುವರಿಯಾಗಿರುವ ಶಾಲೆಯ ಜಾಗವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ್ ತಿಳಿಸಿದರು.

ಜಲ್‌ಜೀವನ್ ಮಿಷನ್ ಯೋಜನೆಯಲ್ಲಿ ಪ್ರಾಥಮಿಕ ಶಾಲೆಗಳಿಗೆ ಶೌಚಾಲಯ, ಆಟದ ಮೈದಾನ, ಅಡುಗೆ ಕೋಣೆಗೆ ನೀರಿನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸರ್ಕಾರಿ ಶಾಲೆಗಳಿಗೆ ಸೇರಿದ ಜಾಗಗಳಿಗೆ ಇನ್ನೂ ಖಾತೆಯಾಗದೆ ಉಳಿದಿದ್ದು, ಅಂತಹ ಶಾಲೆಗಳನ್ನು ಗುರುತಿಸಿ ಖಾತೆ ಮಾಡಿಸುವಂತೆ ಸದಸ್ಯ ಗಂಗಾಂಜನೇಯ ಒತ್ತಾಯಿಸಿದರು.

ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ನೀಡಿದರೆ ಭರ್ತಿ ಮಾಡುವಂತೆ ಕೋರಿ ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಂಡು ಸರ್ಕಾರಕ್ಕೆ ಕಳುಹಿಸಿ
ಕೊಡಲಾಗುವುದು ಎಂದು ಕಾರ್ಯನಿರ್ವಹಣಾಧಿಕಾರಿ ಜೈಪಾಲ್ ತಿಳಿಸಿದರು.

ತಾ.ಪಂ ಉಪಾಧ್ಯಕ್ಷ ಶಾಂತಕುಮಾರ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಜಿ.ಮಧು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT