ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

100ಕ್ಕೂ ಹೆಚ್ಚು ಹಳ್ಳಿಯಲ್ಲಿ ಕುಡಿಯುವ ನೀರಿಲ್ಲ

12 ಕೊಳವೆ ಬಾವಿ ಕೊರೆಯಲು ಅನುಮೋದನೆ
Published 1 ಮೇ 2024, 6:18 IST
Last Updated 1 ಮೇ 2024, 6:18 IST
ಅಕ್ಷರ ಗಾತ್ರ

ತುಮಕೂರು: ಬಿರು ಬೇಸಿಗೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಸದ್ಯ 80 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಮೂಲಕ, 23 ಹಳ್ಳಿಗಳಿಗೆ ಟ್ಯಾಂಕರ್‌ನಿಂದ ನೀರು ಪೂರೈಸಲಾಗುತ್ತಿದೆ. 100ಕ್ಕೂ ಹೆಚ್ಚು ಗ್ರಾಮಗಳು ತೀವ್ರ ಸಮಸ್ಯೆಗೆ ಸಿಲುಕಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ.

‘ನೀರಿನ ಬವಣೆ ಹೆಚ್ಚಿರುವ ಗ್ರಾಮಗಳಲ್ಲಿ ಹೊಸ ಕೊಳವೆ ಬಾವಿ ಕೊರೆಯಲು ₹32.62 ಲಕ್ಷ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆಗಾಗಿ ಸಭೆಗೆ ಮಂಡಿಸಲಾಗಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ರವೀಶ್‌ ಹೇಳಿದರು.

ನಗರದ ಜಿ.ಪಂ ಕಚೇರಿಯಲ್ಲಿ ಮಂಗಳವಾರ ನಡೆದ ನೀರು ಮತ್ತು ನೈರ್ಮಲ್ಯ ಮಿಷನ್ ಜಿಲ್ಲಾ ಮಟ್ಟ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು.

ಜಿ.ಪಂ ಸಿಇಒ ಜಿ.ಪ್ರಭು, ‘ಗ್ರಾಮೀಣ ಭಾಗದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಟ್ಯಾಂಕರ್‌ ಮುಖಾಂತರ ನೀರು ಪೂರೈಸುವ ಮುನ್ನ ಕುಡಿಯಲು ಯೋಗ್ಯವಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. 3 ದಿನಗಳಿಗೊಮ್ಮೆ ನೀರನ್ನು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಸೂಚಿಸಿದರು.

ಚುನಾವಣೆ ಕಾರ್ಯದ ಒತ್ತಡ ಕಡಿಮೆಯಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ, ನರೇಗಾ ಕಾಮಗಾರಿಗಳ ಆರಂಭಕ್ಕೆ ಆದ್ಯತೆ ನೀಡಬೇಕು ಎಂದರು.

12 ಸಮಸ್ಯಾತ್ಮಕ ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಯಲು ಸಿದ್ಧಪಡಿಸಿದ ಕ್ರಿಯಾ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಗುಬ್ಬಿ ತಾಲ್ಲೂಕಿನ ಮಣಿಕುಪ್ಪೆ, ಬಿದರೆ, ತುಮಕೂರಿನ ಅಪ್ಪಿನಾಯಕನಹಳ್ಳಿ, ತುರುವೇಕೆರೆಯ ಮಂಕಿಕುಪ್ಪೆ, ಕಣತೂರು, ಶಿರಾದ ಸಾಕ್ಷಿಹಳ್ಳಿ, ರಾಮನಹಳ್ಳಿ, ಯರದಕಟ್ಟೆ, ಸೋರೆಕುಂಟೆ, ಜಿ.ರಂಗನಹಳ್ಳಿ, ಶಾಖದಡು ಹಾಗೂ ಅಂತಾಪುರ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಯಲಾಗುತ್ತದೆ.

ಜಿ.ಪಂ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ, ವಿಜಯ್‍ಕುಮಾರ್, ಡಿಡಿಪಿಐ ರಂಗಧಾಮಯ್ಯ, ಕೃಷಿ ಜಂಟಿ ನಿರ್ದೇಶಕ ರಮೇಶ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್‌ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT