ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

Last Updated 2 ಡಿಸೆಂಬರ್ 2021, 5:00 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ, ಪಾರದರ್ಶಕವಾಗಿ ನಡೆಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬುಧವಾರ ಜರುಗಿದ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆ ಸಂಬಂಧ ಈಗಾಗಲೇ ಎಲ್ಲಾ ತಾಲ್ಲೂಕುಗಳಲ್ಲಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ತರಬೇತಿ ನಂತರ ಯಾವುದೇ ಲೋಪದೋಷಗಳಿಲ್ಲದಂತೆ, ಅಹಿತಕರ ಘಟನೆಗೆ ಆಸ್ಪದ ಮಾಡಿಕೊಡದಂತೆ ಚುನಾವಣೆ ಕೆಲಸ ನಿರ್ವಹಿಸಬೇಕು ಎಂದು ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ಗಳಿಗೆ ಸಲಹೆ ನೀಡಿದರು.

ಸಾರ್ವತ್ರಿಕ ಚುನಾವಣೆ ವಿಧಾನಕ್ಕಿಂತ ವಿಧಾನ ಪರಿಷತ್ ಚುನಾವಣೆ ವಿಧಾನ ಭಿನ್ನವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಚುನಾವಣೆಯ ದಿನ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಪೂರ್ಣ ಸಮಯದವರೆಗೆ ಮತ ಕೇಂದ್ರಗಳಲ್ಲಿ ಹಾಜರಿದ್ದು, ಕಾರ್ಯ ನಿರ್ವಹಿಸಬೇಕು ಎಂದರು.

ಪ್ರತಿ ಮತ ಕೇಂದ್ರಗಳಲ್ಲಿ ಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಯಾವುದೇ ರೀತಿಯ ವೈಯಕ್ತಿಕ ಆಸಕ್ತಿಗಳಿಗೆ ಎಡೆಮಾಡಿಕೊಡದೆ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಸಂಪೂರ್ಣ ಜವಾಬ್ದಾರಿ, ಅಧಿಕಾರವನ್ನು ಪ್ರಿಸೈಡಿಂಗ್ ಅಧಿಕಾರಿ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ನೀಡಲಾಗಿದೆ. ಗ್ರಾ.ಪಂ ಪಿಡಿಒ ಅಥವಾ ಕಾರ್ಯದರ್ಶಿಗಳು ಮತದಾರರನ್ನು ಗುರುತಿಸುವ ಅಧಿಕಾರ ಹೊಂದಿರುತ್ತಾರೆ. ಚುನಾವಣಾ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಡಯಟ್ ಪ್ರಾಂಶುಪಾಲ ಮಂಜುನಾಥ್, ಮಾಸ್ಟರ್ ಟ್ರೈನರ್ ರಂಗಧಾಮಯ್ಯ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT