ಬುಧವಾರ, ಸೆಪ್ಟೆಂಬರ್ 29, 2021
19 °C

ಕೋವಿಡ್ ಕೇಂದ್ರದಲ್ಲೇ ಚಿಕಿತ್ಸೆ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೋವಿಡ್ ಮೂರನೇ ಅಲೆಯಲ್ಲಿ ಕೊರೊನಾ ಸೋಂಕಿತರನ್ನು ಯಾವುದೇ ಕಾರಣಕ್ಕೂ ಹೋಂ ಕ್ವಾರಂಟೈನ್ ಮಾಡಬಾರದು. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲೇ ಚಿಕಿತ್ಸೆ ನೀಡಬೇಕು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್ 3ನೇ ಅಲೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿ, ಹೋಂ ಕ್ವಾರಂಟೈನ್ ವ್ಯವಸ್ಥೆ ನಿಲ್ಲಿಸಿ, ಕೋವಿಡ್ ಕೇರ್ ಸೆಂಟರ್‌ಗಳಲ್ಲೇ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶಿಸಿದರು.

ರೈಲು, ಬಸ್ ನಿಲ್ದಾಣಗಳಲ್ಲಿ ಹೊರಗಿನಿಂದ ಬರುವವರನ್ನು ಆ್ಯಕ್ಸಿಮೀಟರ್‌, ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣ ಇದ್ದವರನ್ನು ‍ರ‍್ಯಾಟ್ ಅಥವಾ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ಇಂದಿನಿಂದಲೇ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು. ಪ್ರತಿನಿತ್ಯ ಗರಿಷ್ಠ ಪ್ರಮಾಣದಲ್ಲಿ ಪರೀಕ್ಷೆ ಮಾಡಬೇಕು. ಕೋವಿಡ್ ಹೆಚ್ಚಿರುವ ಪ್ರದೇಶಗಳಲ್ಲಿ ಪ್ರತಿ ಮನೆಯಲ್ಲೂ ಪರೀಕ್ಷೆ ನಡೆಸಬೇಕು ಎಂದು ಹೇಳಿದರು.

ಶಿರಾ ಸೇರಿದಂತೆ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಪರೀಕ್ಷೆಯನ್ನೇ ಮಾಡದ ಪ್ರದೇಶಗಳಲ್ಲಿ ಹಾಗೂ ಮಾರುಕಟ್ಟೆ, ಮಂಡಿ, ಸಂತೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿ ಬಂದವರಿಗೆ ಮಾತ್ರ ಮಂಡಿಗಳಿಗೆ ಬರಲು ಅವಕಾಶ ನೀಡಬೇಕು. ನೆಗೆಟಿವ್ ವರದಿಯನ್ನು ಹಾಜರುಪಡಿಸಬೇಕು. ಕೋವಿಡ್ ನಿರ್ವಹಣೆಯಲ್ಲಿ ಸೂಕ್ತ ರೀತಿಯಲ್ಲಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮವಹಿಸಬೇಕು. ನಿಯಮ ಮೀರಿದವರ ವಿರುದ್ಧ ಕಾನೂನಿನಂತೆ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸಂಭಾವ್ಯ ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬಹುದಾದ ಎಲ್ಲಾ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‌, ರಾಜೇಶ್ ಗೌಡ, ಚಿದಾನಂದಗೌಡ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಧಿಕಾರಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.