ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ನಗರದಲ್ಲಿ ವಾಣಿಜ್ಯ ಚಟುವಟಿಕೆ; ಮದ್ಯ ಮಾರಾಟ

ನಿಯಮ ಅನುಸಾರ ವಹಿವಾಟು ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ
Last Updated 7 ಮೇ 2020, 16:13 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವೈನ್‌ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟುಗಳನ್ನು ಶುಕ್ರವಾರದಿಂದ ತೆರೆಯಲು ಅವಕಾಶ ನೀಡಲಾಗಿದೆ.

ಮದ್ಯ ಮಾರಾಟ ಅಂಗಡಿಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮಾಲೀಕರೇ ಜನಜಂಗುಳಿ ನಿಯಂತ್ರಿಸಬೇಕು, ಸ್ವಯಂಜವಾಬ್ದಾರಿಯಿಂದ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ.

ಕೊರೊನಾ ಸೋಂಕು ನಿಯಂತ್ರಣ ಮತ್ತು ಲಾಕ್‌ಡೌನ್‌ ಸಡಿಲಿಕೆ ಕುರಿತುಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವೈನ್‌ಶಾಪ್‌, ಎಂಎಸ್‌ಐಎಲ್‌ ಅಂಗಡಿಗಳು ಬೆಳಿಗ್ಗೆ 9ರಿಂದ ಸಂಜೆ 7 ಗಂಟೆ ವರೆಗೆ ತೆರೆದಿರಬೇಕು. ಅಂಗಡಿಗಳ ಸಿ.ಸಿ ಟಿ.ವಿ ಚಾಲನೆಯಲ್ಲಿ ಇರಬೇಕು. ಈ ಬಗ್ಗೆ ಜಿಲ್ಲಾ ಅಬಕಾರಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಚಿವರು ತಿಳಿಸಿದರು.

ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಅಂಗಡಿಗಳನ್ನು ಬೆಳಿಗ್ಗೆ 10ರಿಂದ ರಾತ್ರಿ 7 ಗಂಟೆವರೆಗೆ ತೆರೆಯಲು ಅನುಮತಿಸಲಾಗಿದೆ. ಅಂಗಡಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮರಾ ಅಳವಡಿಸಬೇಕು. ಸ್ಯಾನಿಟೈಸರ್ ಇಡಬೇಕು, ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬೇಕು ಎಂದು ಸಚಿವರು ವರ್ತಕರಿಗೆ ಸೂಚಿಸಿದರು.

ನಗರ ಸಂಪರ್ಕಿಸುವ ರಸ್ತೆಗಳ ಮೂಲಕ ಬರುವ ಎಲ್ಲ ವಾಹನಗಳನ್ನು ತಪಾಸಣೆಗೆ ಒಳಪಡಿಸಬೇಕು. ಅಗತ್ಯವಿರುವ ಕಡೆ ಚೆಕ್‍ಪೋಸ್ಟ್‌ಗಳನ್ನು ನಿರ್ಮಿಸುವಂತೆ ಹೇಳಿದರು.

ಕೇಂದ್ರ ಸರ್ಕಾರದ ಆದೇಶದಂತೆ ಕೋವಿಡ್–19 ನಿಯಂತ್ರಣಕ್ಕಾಗಿ ಮೇ 17ರ ವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ತಿಳಿಸಿದರು.

ವಾಣಿಜ್ಯೋದ್ಯಮ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್, ವರ್ತಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಶಾಪಿಂಗ್‌ ಕಾಂಪ್ಲೆಕ್‌ಗೆ ಅನುಮತಿ ಇಲ್ಲ

ಜಿಮ್, ಶಾಪಿಂಗ್ ಕಾಂಪ್ಲೆಕ್ಸ್, ಈಜು ಕೊಳ ಹಾಗೂ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅವಕಾಶ ಇರುವುದಿಲ್ಲ. ಸರ್ಕಾರದ ಆದೇಶ ಮತ್ತು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ವರ್ತಕರು ಪಾಲಿಸಬೇಕು. ಲಾಕ್‌ಡೌನ್‌ ನಿಯಮಗಳ ಪಾಲನೆ ಕುರಿತು ನಿಗಾವಹಿಸಲು 6 ಸಂಚಾರಿ ಕಾರ್ಯಪಡೆ ಸದಸ್ಯರು ಗಸ್ತಿನಲ್ಲಿರುತ್ತಾರೆ. ಸೂಚನೆ ಉಲ್ಲಂಘನೆ ಕಂಡುಬಂದ ಅಂಗಡಿಗಳ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಹಾಗೂ ಅಂತಹ ವ್ಯಾಪಾರ ಮಳಿಗೆಗಳನ್ನು ಮುಚ್ಚಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT