ಶುಕ್ರವಾರ, ಜನವರಿ 17, 2020
24 °C
ಹೈಟೆಕ್‌ಗೊಳ್ಳಲಿದೆ ಹಾಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ

ತುಮಕೂರು| ತಾತ್ಕಾಲಿಕ ಬಸ್ ನಿಲ್ದಾಣದೊಂದಿಗೆ ಸಹಕರಿಸಿ: ಜಿ.ಬಿ.ಜ್ಯೋತಿಗಣೇಶ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‍ ನಿಲ್ದಾಣವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಹೈಟೆಕ್‌ಗೊಳಿಸುವ ಹಿನ್ನೆಲೆಯಲ್ಲಿ ಹಾಲಿ ಇರುವ ಬಸ್‍ ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ನಿಗಮದ ತುಮಕೂರು ಘಟಕ-1ರ ಸ್ಥಳಕ್ಕೆ ಬುಧವಾರ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಯಿತು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾರ್ವಜನಿಕರು ಸ್ಥಳಾಂತರಗೊಂಡಿರುವ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ನಗರದ ಅಶೋಕ ರಸ್ತೆಯಲ್ಲಿರುವ ಹಳೆಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ ಭಾಗದಲ್ಲಿ ನೂತನ ಅತ್ಯಾಧುನಿಕ ಬಸ್‍ ನಿಲ್ದಾಣ ನಿರ್ಮಿಸಲು ಸುಮಾರು ₹82 ಕೋಟಿಯ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಲಾಗಿದ್ದು, ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.

ತಾತ್ಕಾಲಿಕ ಬಸ್ ನಿಲ್ದಾಣದ ಸ್ಥಳಾಂತರದ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ಪತ್ರಿಕೆಗಳ ಮೂಲಕ ತಿಳಿಸಲಾಗಿದ್ದು, ಆದಾಗ್ಯೂ ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಬುಧವಾರ ಅನೌಪಚಾರಿಕವಾಗಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ತುಮಕೂರು ಘಟಕದಿಂದ ತುಮಕೂರು-ತಿರುಪತಿ, ತುಮಕೂರು-ಮಧುರೈ, ತುಮಕೂರು-ತಿಪಟೂರು, ಹೊಸದುರ್ಗ-ಬೆಂಗಳೂರು ಮಾರ್ಗವಾಗಿ ಚಲಿಸುವ 4 ಹೊಸ ಬಸ್‍ಗಳನ್ನು ಕೂಡ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದರು.

ತಾತ್ಕಾಲಿಕ ಬಸ್ ನಿಲ್ದಾಣದಿಂದ ಹೊರಡುವ ವಾಹನಗಳ ಸಂಚಾರ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ವಾಹನ ಸಂಚಾರದಲ್ಲಿ ಕೂಡ ಬದಲಾವಣೆ ಆಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದರು

ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಲಲಿತಾ ರವೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಶಿಕೃಷ್ಣ, ಪಾಲಿಕೆ ಆಯುಕ್ತ ಟಿ.ಭೂಬಾಲನ್, ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್, ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧಿಕಾರಿಗಳು, ಕೆಎಸ್‍ಆರ್‌ಟಿಸಿ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು