ತುಮಕೂರು: ನಗರದಲ್ಲಿ ₹70 ಕೋಟಿ ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.
ನಗರದಲ್ಲಿ ಶನಿವಾರ ಅಮಾನಿಕೆರೆ ಬಳಿ ಶಿರಾ ರಸ್ತೆಯಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಠ ಎರಡು ತಾಸು ಬೇಕಾಗುತ್ತದೆ. ಇಲ್ಲಿಯೇ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸಿದರೆ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.
ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಿಗೆ ಪೂರಕವಾದ ವಿದ್ಯಾರ್ಥಿ ನಿಲಯಗಳಿಲ್ಲ. ಈಗಿರುವ ಹಾಸ್ಟೆಲ್ ಸಾಲುತ್ತಿಲ್ಲ. ಜಿಲ್ಲೆಯಲ್ಲಿ ₹50 ಕೋಟಿ ವೆಚ್ಚದಲ್ಲಿ 12 ನೂತನ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ನಗರದ ವಿವಿಧ ವಾರ್ಡ್‌ಗಳ ಅಭಿವೃದ್ಧಿಗೆ ಸುಮಾರು ₹100 ಕೋಟಿ ವೆಚ್ಚ ಮಾಡಲಾಗುತ್ತಿದೆ. ಗುಬ್ಬಿ ರಸ್ತೆಯಲ್ಲಿರುವ ಭೀಮಸಂದ್ರದ ಸೇತುವೆ ವಿಸ್ತರಣೆ ಕಾಮಗಾರಿ ಸದ್ಯದಲ್ಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಅಮಾನಿಕೆರೆ ಕೋಡಿ ಹರಿಯುವ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣ ಬಹುದಿನಗಳ ಬೇಡಿಕೆಯಾಗಿತ್ತು. ಈ ಹಿಂದೆ ಸೇತುವೆ ಕಿರಿದಾಗಿದ್ದರಿಂದ ಹೆಚ್ಚಿನ ಅಪಘಾತಗಳಾಗಿ ಸಾವು–ನೋವು ಸಂಭವಿಸಿವೆ. ₹6.60 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕೊರಟಗೆರೆ, ಶಿರಾ, ಮಧುಗಿರಿ ಭಾಗದಿಂದ ಸಂಚರಿಸುವ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 3 ಸಾವಿರ ಹಾಗೂ ಗುಬ್ಬಿ ತಾಲೂಕಿನ ಎಚ್‍ಎಎಲ್ ಘಟಕದಲ್ಲಿ 6,500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿರುವ ಜಿಲ್ಲೆಗೆ ಅಗತ್ಯ ಸವಲತ್ತು ನೀಡುವ ಅವಶ್ಯಕತೆ ಇದ್ದು, ಸರ್ಕಾರ ಇದಕ್ಕೆ ಬದ್ಧವಾಗಿದೆ ಎಂದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ವಸಂತನರಸಾಪುರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದ ನಂತರ ಶಿರಾಗೇಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿತ್ತು. ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಿದೆ’ ಎಂದು ಹೇಳಿದರು.
ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಇತರರು ಹಾಜರಿದ್ದರು.
ಈಗಿರುವ ಜಿಲ್ಲಾ ಆಸ್ಪತ್ರೆಯು ಹಳೆಯ ಕಲ್ಲಿನ ಕಟ್ಟಡವಾಗಿದೆ. ₹130 ಕೋಟಿ ವೆಚ್ಚದಲ್ಲಿ ಆಧುನಿಕ ಸೌಲಭ್ಯವುಳ್ಳ ಸುಸಜ್ಜಿತ ನೂತನ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಭರವಸೆ ನೀಡಿದರು. ಕಾರ್ಯನಿರತ ಮಹಿಳೆಯರಿಗಾಗಿ ₹50 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಜಾರಿಯಿಂದ ಸರ್ಕಾರದ ಬಳಿ ಹಣವಿಲ್ಲ ಎಂದು ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ ಎಂಬುವುದು ಸತ್ಯಕ್ಕೆ ದೂರವಾದ ಮಾತು ಎಂದು ಸಚಿವ ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲ ಜಾತಿ ಧರ್ಮದಲ್ಲಿರುವ ಬಡವರು ಬಡವರಾಗಿಯೇ ಉಳಿಯಬಾರದು. ಬಡತನ ರೇಖೆಗಿಂತ ಕೆಳಗಿರುವವರು ಬೇರೆಯವರ ರೀತಿ ಅಭಿವೃದ್ಧಿ ಹೊಂದಬೇಕು ಎಂಬ ನಿಟ್ಟಿನಲ್ಲಿ ಗ್ಯಾರಂಟಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಉದ್ದೇಶವಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.