ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್‌ಗೆ ಅವಕಾಶ ಮಾಡಿಕೊಡಬೇಕು: ಬೇಡಿಕೆ

Published 6 ಮಾರ್ಚ್ 2024, 6:51 IST
Last Updated 6 ಮಾರ್ಚ್ 2024, 6:51 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್‌ಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲೆಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಜೆಡಿಎಸ್– ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದ್ದು, ತುಮಕೂರು ಕ್ಷೇತ್ರವನ್ನು ನಮಗೆ ಬಿಟ್ಟುಕೊಡಬೇಕು ಎಂದು ಮುಖಂಡರು ಮನವಿ ಮಾಡಿದ್ದಾರೆ. ಈವರೆಗೂ ಒಮ್ಮೆಯೂ ಟಿಕೆಟ್ ಬಗ್ಗೆ ಬಾಯಿ ಬಿಡದ ಜಿಲ್ಲೆಯ ನಾಯಕರು ಇದೇ ಮೊದಲ ಬಾರಿಗೆ ಸಭೆ ನಡೆಸಿ ಅವಕಾಶಕ್ಕಾಗಿ ಬೇಡಿಕೆ ಸಲ್ಲಿಸಿದ್ದಾರೆ.

ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ‘ತುಮಕೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಬೇಕು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಬೇಕು. ಇಲ್ಲವಾದರೆ ಪಕ್ಷದ ನಾಯಕರನ್ನು ನಿಲ್ಲಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು’ ಎಂದು ತಿಳಿಸಿದರು.

ಜೆಡಿಎಸ್ ಅಸ್ತಿತ್ವದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇತರೆ ಪಕ್ಷದ ಅಭ್ಯರ್ಥಿಗಳಿಗಿಂತ ಜೆಡಿಎಸ್ ಅಭ್ಯರ್ಥಿಗಳು ಅತಿ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಹಾಗಾಗಿ ಕ್ಷೇತ್ರವನ್ನು ನಮ್ಮಲ್ಲೇ ಉಳಿಸಿಕೊಳ್ಳಬೇಕು. ಒಂದು ವೇಳೆ ಮೈತ್ರಿ ಮಾತುಕತೆ ಸಮಯದಲ್ಲಿ ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿರಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಲೋಕಸಭಾ ಕ್ಷೇತ್ರದ ಉಸ್ತುವಾರಿಯೂ ಆದ ಶಾಸಕ ಸಿ.ಬಿ.ಸುರೇಶ್‌ಬಾಬು, ‘ಸಭೆಯ ತೀರ್ಮಾನದಂತೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಬೇಕು. ಇಲ್ಲವಾದರೆ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬ ಆಶಯವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಉಸ್ತುವಾರಿ ಹೊತ್ತಿರುವ ಬಿಜೆಪಿಯ ಕೆ.ಗೋಪಾಲಯ್ಯ ಜತೆಗೆ ಚರ್ಚಿಸಲಾಗುವುದು’ ಎಂದು ಹೇಳಿದರು.

ಮಾಜಿ ಶಾಸಕ ಡಿ.ನಾಗರಾಜಯ್ಯ, ತಿಪಟೂರಿನ ಕೆ.ಟಿ.ಶಾಂತಕುಮಾರ್, ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಇತರರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಸ್ಪರ್ಧಿಸುವಂತೆ ಪಕ್ಷ ಹೇಳಿದರೆ ನಾನೂ ಸ್ಪರ್ಧಿಸುತ್ತೇನೆ. ಒಂದು ವೇಳೆ ಬಿಜೆಪಿಯಿಂದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಕೆಲಸ ಮಾಡಿ ಮೈತ್ರಿ ಧರ್ಮ ಪಾಲಿಸಲಾಗುವುದು. ಜೆಡಿಎಸ್‌ಗೆ ಅವಕಾಶ ಸಿಕ್ಕರೆ ಅವರು ನಮ್ಮ ಪರವಾಗಿ ಕೆಲಸ ಮಾಡಬೇಕಾಗುತ್ತದೆ. ಮೈತ್ರಿ ಧರ್ಮ ಪಾಲಿಸುವುದು ಇಬ್ಬರಿಗೂ ಅನಿವಾರ್ಯವಾಗಿದೆ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಸಿ.ಆಂಜನಪ್ಪ, ‘ಈಗಾಗಲೇ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಚರ್ಚಿಸಲಾಗುವುದು. ಮೈತ್ರಿ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ಡಿ.ನಾಗರಾಜಯ್ಯ, ಕೆ.ಎಂ.ತಿಮ್ಮರಾಯಪ್ಪ, ಸುಧಾಕರಲಾಲ್, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಕೆ.ಟಿ.ಶಾಂತಕುಮಾರ್, ಕೊಂಡವಾಡಿ ಚಂದ್ರಶೇಖರ್, ಎನ್.ಗೋವಿಂದರಾಜು, ಜ್ಯೋತಿಪ್ರಕಾಶ್ ಮಿರ್ಜಿ, ಸೋಲಾರ್ ಕೃಷ್ಣಮೂರ್ತಿ, ವಿಜಯಗೌಡ, ಉಗ್ರೇಶ್, ಎಸ್.ಆರ್.ಗೌಡ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಕೇಸರಿ ಶಾಲು ಧರಿಸಲ್ಲ

ಲೋಕಸಭೆ ಚುನಾವಣೆ ಸಮಯದಲ್ಲಿ ಜೆಡಿಎಸ್ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಪ್ರಚಾರ ಮಾಡುವುದಿಲ್ಲ ಎಂದು ಕೆ.ಎ.ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಅನಿವಾರ್ಯವಾಗಿ ಎಚ್.ಡಿ.ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡಿದ್ದರು. ನಮ್ಮದು ಹಸಿರು ಶಾಲಿನ ಗುರುತು. ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದರೂ ಪಕ್ಷದ ತತ್ವ ಸಿದ್ಧಾಂತಗಳನ್ನು ಬಿಡುವುದಿಲ್ಲ. ಹಸಿರು ಶಾಲು ಹಾಕಿಕೊಂಡೇ ಜೆಡಿಎಸ್ ಕಾರ್ಯಕರ್ತರು ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT