ಗುರುವಾರ , ಮಾರ್ಚ್ 30, 2023
32 °C
ಪಟ್ಟಣದ ಪಾದಚಾರಿ ಮಾರ್ಗ ಒತ್ತುವರಿ– ತೆರವಿಗೆ ಸಾರ್ವಜನಿಕರ ಆಗ್ರಹ: ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯ

ಮಧುಗಿರಿ: ಅಡ್ಡಾದಿಡ್ಡಿ ವಾಹನ ನಿಲುಗಡೆ, ಸಂಚಾರಕ್ಕೆ ಅಡ್ಡಿ

ಟಿ.ಪ್ರಸನ್ನಕುಮಾರ್ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದರೂ, ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಪೊಲೀಸರ ತಾತ್ಸಾರವೇ ಕಾರಣ. ಕಿರಿದಾದ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಕೂಗು ಹೆಚ್ಚಿದೆ.

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿತ್ಯ ಸಾವಿರಾರು ಮಂದಿ ಪಟ್ಟಣಕ್ಕೆ ಬರುತ್ತಾರೆ. ಆದರೆ ಅವರ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯಿಲ್ಲ. ಪಾದಚಾರಿ ಮಾರ್ಗವನ್ನು ಅಂಗಡಿ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವೆಡೆ ವಾಹನ ನಿಲುಗಡೆ ಸ್ಥಳವನ್ನೂ ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವುದರಿಂದ ಕಿರಿಕಿರಿಯಾಗುತ್ತಿದೆ ಎನ್ನುವುದು ವಾಹನ ಸವಾರರ ಆರೋಪ.

ಪಟ್ಟಣದ ಕೆ.ಎಚ್. ರಸ್ತೆ, ಎಚ್.ಎಸ್. ರಸ್ತೆ, ಪುರಸಭೆ ಮುಂಭಾಗದ ರಸ್ತೆ ಹಾಗೂ ಡೂಂ ಲೈಟ್ ವೃತ್ತದಲ್ಲಿ ಬೆಸಸಂಖ್ಯೆ ಬರುವ ದಿನಾಂಕದಂದು ಒಂದು ಕಡೆ ಪಾರ್ಕಿಂಗ್ ಹಾಗೂ ಸರಿಸಂಖ್ಯೆ ದಿನಾಂಕದಂದು ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೆಲವೆಡೆ ವಾಹನಗಳ ಪಾರ್ಕಿಂಗ್‌ಗೆ ದಿನಾಂಕ ನಿಗದಿಪಡಿಸಿಲ್ಲ. ಹೀಗಾಗಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡಲಾಗುತ್ತಿದೆ. ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳೇ ಪಾರ್ಕಿಂಗ್ ಜಾಗಗಳಾಗಿ ಮಾರ್ಪಡುತ್ತಿವೆ.

ಪಟ್ಟಣದ ಪ್ರಮುಖ ವೃತ್ತಗಳಾದ ತುಮಕೂರು ಗೇಟ್, ಟಿವಿವಿ ವೃತ್ತ, ತಾಲ್ಲೂಕು ಕಚೇರಿ, ಖಾಸಗಿ ಬಸ್ ನಿಲ್ದಾಣ, ಶಿರಾ ಗೇಟ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಲಾಗುತ್ತದೆ.

ಪಟ್ಟಣದ ಎಚ್.ಎಸ್.ರಸ್ತೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಬ್ಯಾಂಕ್ ಇರುವುದರಿಂದ ನಿತ್ಯ ನೂರಾರು ಗ್ರಾಹಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಬ್ಯಾಂಕ್‌ಗಳಿಗೆ ತೆರಳುತ್ತಾರೆ. ಬ್ಯಾಂಕ್ ಮುಂಭಾಗ ವಾಹನಗಳನ್ನು ಅಡ್ಡಲಾಗಿ ನಿಲುಗಡೆ ಮಾಡುವುದರಿಂದ ವೃದ್ಧರು, ಮಹಿಳೆಯರ ಮುಕ್ತ ಸಂಚಾರಕ್ಕೆ ತೊಂದರೆಯಾಗುತ್ತಿದೆ. ವಾಹನವನ್ನು ಸರಿಯಾಗಿ ನಿಲ್ಲಿಸಿ ಎಂದು ಹೇಳಿದರೆ ಜಗಳಗಳಿಗೆ ಕಾರಣವಾಗುತ್ತದೆ.

ಪುರಸಭೆ ಮುಖ್ಯರಸ್ತೆ ಸೇರಿದಂತೆ ಪಟ್ಟಣದ ಇತರೆ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳ ಪ್ರಯಾಣಕ್ಕೆ ಸರಿಯಾದ ಮಾರ್ಗಗಳೇ ಇಲ್ಲದಂತಾಗಿದೆ. ಅಂಗಡಿ ಮಾಲೀಕರು ಪಾದಚಾರಿ ರಸ್ತೆಗಳನ್ನು ಅತಿಕ್ರಮಣ ಮಾಡಿರುವುದರಿಂದ ಪಾದಚಾರಿಗಳು ಅನಿವಾರ್ಯವಾಗಿ  ರಸ್ತೆಗಿಳಿಯಬೇಕಾಗಿದೆ. ವಾಹನಗಳನ್ನು ರಸ್ತೆಯಲ್ಲಿಯೇ ಪಾರ್ಕಿಂಗ್ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ.

ರಸ್ತೆ ಸುರಕ್ಷತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿತ ರಕ್ಷಣಾ ಸಮಿತಿ ಸಭೆಗಳಲ್ಲಿ ಸಾರ್ವಜನಿಕರು ದೂರು ನೀಡಿದ ಫಲವಾಗಿ ವಾಹನ ನಿಲುಗಡೆಗೆ ನಾಮಪಲಕ ಹಾಗೂ ರಸ್ತೆಗಳಿಗೆ ಬಿಳಿ ಬಣ್ಣದ ಗುರುತು ಮಾಡಲಾಗಿತ್ತು. ವಾಹನ ನಿಲುಗಡೆ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದರು. ನಿತ್ಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದರು. ಆದರೆ ಇದೆಲ್ಲವೂ ಕೆಲವೇ ದಿನಗಳಿಗೆ ಸೀಮಿತವಾಗಿತ್ತು.

ಶಾಲೆ, ಕಾಲೇಜಿಗೆ ಹೋಗಿ ಬರಲು ಸಮಸ್ಯೆಯಾಗುತ್ತದೆ. ರಸ್ತೆಗಳಲ್ಲಿಯೇ ಸಂಚಾರ ಮಾಡಬೇಕಿದೆ. ಅಂಗಡಿ ಮಾಲೀಕರ ಅತಿಕ್ರಮಣ, ವಾಹನಗಳ ಅಡ್ಡಾದಿಡ್ಡಿ ಚಾಲನೆ ಹಾಗೂ ನಿಲುಗಡೆಯಿಂದ ಮುಕ್ತ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

ಪಟ್ಟಣದಲ್ಲಿ ದಿನೇ ದಿನೇ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪಾದಚಾರಿಗಳು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮ ಕೈಗೊಂಡು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎನ್ನುವುದು ಜನರ ಆಗ್ರಹ.

ಪಟ್ಟಣದ ಬಹುತೇಕ ಅಂಗಡಿ ಹಾಗೂ ಮನೆಯ ಮಾಲೀಕರು ಪಾದಚಾರಿ ಜಾಗ ಒತ್ತುವರಿ ಮಾಡಿಕೊಂಡಿರುವುದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಸವಾರರು ಸಂಚಾರಕ್ಕೆ ಅವಕಾಶವೇ ಇಲ್ಲದಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸಾರ್ವಜನಿಕರು ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ನಿರ್ಣಯ ಕೈಗೊಂಡು ಒತ್ತುವರಿ ತೆರವುಗೊಳಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು