ಮಧುಗಿರಿ: ತಾಲ್ಲೂಕಿನ ಪುರವರ ಹೋಬಳಿಯ ಮುದ್ದೇನಹಳ್ಳಿ ಗ್ರಾಮದಲ್ಲಿ ವಾಂತಿ, ಭೇದಿ ಕಾಣಿಸಿಕೊಂಡು ಒಬ್ಬರು ಸಾವನ್ನಪ್ಪಿದ್ದಾರೆ. 7 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುದ್ದೇನಹಳ್ಳಿ ಗ್ರಾಮದಲ್ಲಿ ತಿಪ್ಪೇರಾಯಣ್ಣ (70) ಮೃತರು. ಆ. 26ರಂದು ರಾತ್ರಿ ಗ್ರಾಮದ ಎರಡು ಮನೆಗಳ 7 ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಇದರಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ತಿಪ್ಪೇರಾಯಣ್ಣ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ. ಇನ್ನಿಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಬ್ಬದ ಸಮಯದಲ್ಲಿ ಮನೆಯಲ್ಲೇ ತಯಾರಿಸಿದ್ದ ಆಹಾರ ಸೇವಿಸಿದ್ದರು. ಗ್ರಾಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದರು.