ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Last Updated 17 ನವೆಂಬರ್ 2022, 15:38 IST
ಅಕ್ಷರ ಗಾತ್ರ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ಕುಂದಾಪುರದ ಅಮಾಸೆಬೈಲಿನ ಸುರೇಶ್ ಕೊಠಾರಿ ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಘಟನೆ ವಿವರ: ಅಪರಾಧಿ ಸುರೇಶ್‌ ಚಾಲಕನಾಗಿದ್ದು, ತಾನು ಕೆಲಸ ಮಾಡುತ್ತಿದ್ದ ಶಾಲಾ ಬಸ್ಸಿನಲ್ಲಿ ಆಯಾ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಬಲತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ.

ಗರ್ಭಿಣಿಯಾದ ಬಾಲಕಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬೆಳಕಿಗೆ ಬಂದಿತ್ತು. ನೊಂದ ಬಾಲಕಿಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು.

ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಅಂದಿನ ಕುಂದಾಪುರ ಇನ್‌ಸ್ಪೆಕ್ಟರ್ ಡಿ.ಆರ್.ಮಂಜಪ್ಪ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆ ನಡೆದಿತ್ತು. ನೊಂದ ಬಾಲಕಿಯ ಸಾಕ್ಷಿ, ಪ್ರಕರಣಕ್ಕೆ ಪೂರಕ ಸಾಕ್ಷಿಗಳ ಸಹಿತ ಡಿ.ಎನ್.ಎ ವರದಿಯು ಸುರೇಶ್ ದೋಷಿ ಎಂಬುದನ್ನು ಸಾಬೀತು ಪಡಿಸಿತು.

ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.

ಶಿಕ್ಷೆ ಪ್ರಮಾಣ:ಅಪರಾಧಿ ಸುರೇಶ್ ಕೊಠಾರಿಗೆ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ, ₹ 10000 ದಂಡ, ಲೈಂಗಿಕ ದೌರ್ಜನ್ಯಕ್ಕೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಜೈಲು (ಎರಡು ಶಿಕ್ಷೆ ಏಕಕಾಲದಲ್ಲಿ ಅನುಭವಿಸುವುದು), ₹ 10,000 ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಹೆಚ್ಚುವರಿ ಶಿಕ್ಷೆ, ಸಂತ್ರಸ್ತೆಗೆ ₹ 1 ಲಕ್ಷ ಪರಿಹಾರ, ಆರೋಪಿಗೆ ವಿಧಿಸಿದ ದಂಡದಲ್ಲಿ ಸಂತ್ರಸ್ತೆಗೆ ₹ 15 ಸಾವಿರ ಪರಿಹಾರ ಹಾಗೂ ಸರ್ಕಾರಕ್ಕೆ ₹ 5 ಸಾವಿರ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT