ಪ್ರಾಕೃತಿಕ ವಿಕೋಪ: ಉಡುಪಿಗೆ ₹100 ಕೋಟಿ - ಎಚ್‌.ಡಿ.ಕುಮಾರಸ್ವಾಮಿ ಭರವಸೆ

7
ಪ್ರಗತಿ ಪರಿಶೀಲನಾ ಸಭೆ

ಪ್ರಾಕೃತಿಕ ವಿಕೋಪ: ಉಡುಪಿಗೆ ₹100 ಕೋಟಿ - ಎಚ್‌.ಡಿ.ಕುಮಾರಸ್ವಾಮಿ ಭರವಸೆ

Published:
Updated:
Deccan Herald

ಉಡುಪಿ: ಪ್ರಾಕೃತಿಕ ವಿಕೋಪದಿಂದ ನಲುಗಿರುವ ಉಡುಪಿ ಜಿಲ್ಲೆಗೆ ಶೀಘ್ರವೇ ₹ 70 ರಿಂದ ₹ 100 ಕೋಟಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ₹ 141 ಕೋಟಿ ನಷ್ಟ ಸಂಭವಿಸಿದೆ. 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,232 ಮನೆಗಳು ಹಾನಿಯಾಗಿವೆ ಎಂದು ಅಧಿಕಾರಿಗಳು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.

ಈಗಾಗಲೇ ಸರ್ಕಾರ ₹ 14 ಕೋಟಿ ಬಿಡುಗಡೆ ಮಾಡಿದೆ. ಶೀಘ್ರವೇ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಉಡುಪಿ ಜಿಲ್ಲೆಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲಾಗುವುದು. ಸಮ್ಮಿಶ್ರ ಸರ್ಕಾರ ಕರಾವಳಿ ಭಾಗಕ್ಕೆ ಹೆಚ್ಚಿನ ನೆರವು ನೀಡಲಿದೆ ಎಂದು ಭರವಸೆ ನೀಡಿದರು.

ಪಡಿತರ ಕಾರ್ಡ್‌ಗಳನ್ನು ವಿತರಿಸಲು ಸಿಬ್ಬಂದಿ ಕೊರತೆ ಇರುವುದು ಸಭೆಯಲ್ಲಿ ಗಮನಕ್ಕೆ ಬಂದಿದೆ. ಈ ಸಂಬಂಧ ಅಗತ್ಯ ಹೊರಗುತ್ತಿಗೆ ಸಿಬ್ಬಂದಿ ನೇಮಕಮಾಡಿಕೊಂಡು, ಹೊಸ ಪಡಿತರ ಕಾರ್ಡ್‌ಗೆ ಸಲ್ಲಿಕೆಯಾಗಿರುವ 7,000 ಅರ್ಜಿಗಳನ್ನು ತುರ್ತು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗೆ ಹೆಚ್ಚುವರಿ ಅಧಿಕಾರ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಭಾಗದ ಅಪಾಯಕಾರಿ ಕಾಲುಸಂಕಗಳನ್ನು ತೆರವುಮಾಡಿ ಅಗತ್ಯ ರಸ್ತೆಗಳ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಗೂ ನದಿಗಳಿಂದ ಕುಡಿಯುವ ನೀರಿನ ಪೂರೈಕೆ ಮಾಡಲಾಗುವುದು. ಇದಕ್ಕಾಗಿ ₹ 60 ರಿಂದ ₹ 70 ಸಾವಿರ ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧವಾಗುತ್ತಿದೆ ಎಂದರು.

ವರಾಹಿ ಅಣೆಕಟ್ಟಿಯಿಂದ ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆಗೆ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿವೆ. ಈ ಸಂಬಂಧ ತಕ್ಷಣ ಬೆಂಗಳೂರಿನಲ್ಲಿ ಸಭೆ ಕರೆದು ತಾಂತ್ರಿಕ ಸಮಸ್ಯೆ ಬಗೆಹರಿಸಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಿದ್ದು, ಹಳ್ಳಿಗಳಿಂದ ಶಿಕ್ಷಣ ಪಡೆಯಲು ನಗರಕ್ಕೆ ಬರುವ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ನಗರದಲ್ಲಿ ಮಹಿಳಾ ವಸತಿ ನಿಲಯಗಳ ಸಮಸ್ಯೆ ಇದ್ದು, ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಲು ಭೂಮಿ ಗುರುತಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಪ್ರಸ್ತಾವ ಸಲ್ಲಿಸಿದ ತಕ್ಷಣ ವಸತಿ ನಿಲಯಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕೊರಗ ಸಮುದಾಯದವರಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ನೆರವು ನೀಡುತ್ತಿದ್ದರೂ, ಆರ್ಥಿಕ ಸಮಸ್ಯೆಗಳಿಂದ ಮನೆಕಟ್ಟಿಕೊಳ್ಳಲು ಅವರಿಗೆ ಸಾದ್ಯವಾಗಿಲ್ಲ. ಹಾಗಾಗಿ, 11 ಸಾವಿರ ಕೊರಗ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಮನೆ ನಿರ್ಮಿಸಿ ಕೊಡಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಈಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನಕ್ಕೆ ಆಧಾರವಾಗಿದ್ದ ಬೋಟ್‌ಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ ಪರಿಹಾರ ಹಾಗೂ ಹೊಸ ಬೋಟ್‌ಗಳ ಖರೀದಿಗೆ ಆರ್ಥಿಕ ನೆರವು ನೀಡಲಾಗುವುದು. ಮೀನುಗಾರರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಮೀನುಗಾರರಿಗೆ ಶೀಘ್ರವೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲಾಗುವುದು. ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು. ಜತೆಗೆ ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗುವುದು ಎಂದರು.‌

ಉಡುಪಿ ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ 3,600 ಕುಟುಂಬಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಅಕ್ಟೋಬರ್‌ನೊಳಗೆ ಎಲ್ಲ ಕುಟುಂಗಳಿಗೆ ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ‌

ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ಎಸ್.ಎಲ್.ಭೋಜೇಗೌಡ, ಬಿ.ಎಂ. ಫಾರೂಕ್, ಪ್ರತಾಪ್‍ಚಂದ್ರ ಶೆಟ್ಟಿ ಹಾಗೂ ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ್ ನಿಂಬರಗಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !