ಗುರುವಾರ , ಮೇ 13, 2021
16 °C
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾ ತಜ್ಞರ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್‌

‘ಬೆಡ್‌, ಆಂಬುಲೆನ್ಸ್ ಕೊರತೆಯಾಗದಂತೆ ಎಚ್ಚರ ವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ತಜ್ಞರ ಸಮಿತಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ರಾಜ್ಯದೆಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿದ್ದು ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಿಸಲು ಕೋವಿಟ್‌ ತಪಾಸಣೆ ಹೆಚ್ಚಿಸಿ ಸೋಂಕು ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕಾಗಿದೆ. ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು, ಕ್ಯಾನ್ಸರ್ ರೋಗಿಗಳು ಕೋವಿಡ್‌ನಿಂದ ಹೆಚ್ಚು ಮರಣ ಹೊಂದುತ್ತಿದ್ದು, ಈ ಸಮಸ್ಯೆ ಇರುವ ರೋಗಿಗಳು 15 ದಿನಗಳಿಗೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಶೀಘ್ರ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದಾಗಿದ್ದು, ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ ಎಂದು ತಜ್ಞರ ಸಮಿತಿ ತಿಳಿಸಿತು.

ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೋವಿಡ್‌ಗೆ ಒಳಗಾಗದಂತೆ ಎಚ್ಚರವಹಿಸಬೇಕು. ಈ ಸಂಬಂಧ ಆಸ್ಪತ್ರೆಗಳಲ್ಲಿ ಸೋಂಕು ತಡೆ ಕುರಿತು ತರಬೇತಿ ನೀಡಬೇಕು. ಜಿಲ್ಲೆಯಲ್ಲಿ  ಕೋವಿಡ್ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯವಿರುವ ರೆಮಿಡಿಸಿವರ್ ಚುಚ್ಚುಮದ್ದನ್ನು ಎಚ್ಚರಿಕೆಯಿಂದ ಬಳಸಬೇಕು. ಕೋವಿಡ್ ಲಸಿಕೆ, ಮಾಸ್ಕ್‌ಗಳು, ಪಿಪಿಇ ಕಿಟ್, ಆಕ್ಸಿಜಿನ್ ಕೊರತೆಯಾಗದಂತೆ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಳ್ಳಬೇಕು ಎಂದು ಸಮಿತಿಯಲ್ಲಿ ಅಭಿಪ್ರಾಯಪಟ್ಟಿತು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಎಲ್ಲ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸೂಚನೆಯಂತೆ ಅಗತ್ಯ ಪ್ರಮಾಣದ ಬೆಡ್‌ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಬರುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕು. ಖಾಸಗಿ ಸಂಸ್ಥೆಗಳು, ಮಾಲ್‌ಗಳು, ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆ ಕೋವಿಡ್ ಪರೀಕ್ಷೆ ನಡೆಸಲು ಅಗತ್ಯ ಸಹಕಾರ ನೀಡಬೇಕು. ಇಲ್ಲವಾದರೆ ಎಪಿಡಮಿಕ್ ಕಾಯ್ದೆ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಬೆಡ್‌ಗಳ ಕೊರೆತೆ ಎದುರಾಗದಂತೆ ಬೆಡ್ ನಿರ್ವಹಣಾ ವ್ಯವಸ್ಥೆ ಮಾಡಬೇಕು. ಖಾಸಗಿ ಆಸ್ಪತ್ರೆಗಳು ಲಭ್ಯವಿರುವ ಬೆಡ್‌ಗಳ ವಿವರಗಳನ್ನು ಪ್ರತಿದಿನ ನೀಡಬೇಕು. ಅಂಬುಲೆನ್ಸ್‌ಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ಕೆ.ರಾಜು, ಡಿಎಚ್ಒ ಡಾ. ಸುದೀರ್ ಚಂದ್ರ ಸೂಡ, ಡಾ. ಪ್ರಶಾಂತ್‌ ಭಟ್, ಜಿಲ್ಲಾ ತಜ್ಞರ ಸಮಿತಿಯ ವೈದ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಮೋದಿ ಮೆಚ್ಚುಗೆ

ಎಂಐಟಿಯಲ್ಲಿ ಕಂಟೈನ್ಮೆಟ್‌ ವಲಯ ರಚಿಸಿ ಕೋವಿಡ್ ನಿಯಂತ್ರಣಕ್ಕೆ ತಂದ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕೋವಿಡ್ ತಡೆಗೆ ಇದೇ ಮಾದರಿಯಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.