ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

300 ಕಿ.ಲೀ ಹೆಚ್ಚುವರಿ ಸೀಮೆಎಣ್ಣೆಗೆ ಪ್ರಸ್ತಾವ

ಬಂದರು ಇಲಾಖೆ ಕಾಮಗಾರಿಗಳ ಸ್ಥಳ ಪರಿಶೀಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Last Updated 30 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಬಂದರು ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ವಿಳಂಬವಾಗಿದೆ. ಶೀಘ್ರ ರಾಜ್ಯಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಕೊಡೇರಿಯಲ್ಲಿ ₹ 33 ಕೋಟಿ ವೆಚ್ಚದ ಬ್ರೇಕ್ ವಾಟರ್ ಕಾಮಗಾರಿ ಜನವರಿ ಅಂತ್ಯಕ್ಕೆ ಮುಗಿಯಬೇಕಿತ್ತು. ಇದುವರೆಗೂ ಶೇ 20ರಷ್ಟು ಕಾಮಗಾರಿ ಮಾತ್ರ ಮುಗಿದಿದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಕಾಮಗಾರಿ ಮುಗಿಸದ ಗುತ್ತಿಗೆದಾರರ ಲೈಸೆನ್ಸ್ ರದ್ದು ಮಾಡುವ ಕುರಿತು ಹಾಗೂ ಕಂಪೆನಿಯನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋಡಿ ಕನ್ಯಾನದಲ್ಲಿ ಡ್ರೆಜ್ಜಿಂಗ್ ಮಾಡದಿರುವ ಕಾರಣ, ಬೋಟ್‍ಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಡ್ರೆಜ್ಜಿಂಗ್ ನಡೆಸಲು ಸಿ.ಆರ್.ಝೆಡ್‌ ನಿಯಮಗಳನ್ವಯ ಅನುಮತಿ ಪಡೆದು ಕಾಮಗಾರಿ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು.

ಮಲ್ಪೆಯಲ್ಲಿ 3ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆಪ್ಟೆಂಬರ್ ಅಂತ್ಯದೊಳಗೆ ಮೀನುಗಾರಿಕಾ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಬಂದರು ಇಲಾಖೆ ಅಧಿಕಾರಿಗಳಿಗೆ ಕೋಟ ಸೂಚಿಸಿದರು.

ಜಿಲ್ಲೆಯಲ್ಲಿ ಮೀನುಗಾರರಿಗೆ 170 ಕಿ.ಲೀ ಸೀಮೆಎಣ್ಣೆ ವಿತರಿಸಲಾಗುತ್ತಿದ್ದು, ಹೆಚ್ಚುವರಿ 300 ಲೀಟರ್ ಸೀಮೆಎಣ್ಣೆಗೆ ಪ್ರಸ್ತಾವ ಸಲ್ಲಿಸಲಾಗುವುದು. ಇದರಿಂದ 4000ಕ್ಕೂ ಅಧಿಕ ನಾಡದೋಣಿ ಮೀನುಗಾರರಿಗೆ ಪ್ರಯೋಜನವಾಗಲಿದೆ ಎಂದರು.

ಸೀಮೆಎಣ್ಣೆ ದಾಸ್ತಾನು ಹಾಗೂ ಇತರ ವ್ಯವಸ್ಥೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬಂದರು, ಒಳನಾಡು ಜಲ ಸಾರಿಗೆ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT