ಮಂಗಳವಾರ, ಆಗಸ್ಟ್ 3, 2021
27 °C
ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್

ಸರ್ಕಾರಿ ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತ ಹಣ ಬಿಡುಗಡೆ ಮಾಡಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತೆಗಳು ಮೇಲ್ದರ್ಜೆಗೇರಿಸಲು ಅಗತ್ಯವಿರುವ ಸೌಲಭ್ಯಗಳ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಂದಾಪುರದ ಡಾ.ಜಿ.ಶಂಕರ್ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ನಿರ್ಧರಿಸಲಾಗಿದ್ದು, ಈಗಾಗಲೇ ಎಸ್‌ಬಿಐನಿಂದ 4 ಹಾಗೂ ಇನ್ಫೋಸಿಸ್‌ ಸಂಸ್ಥೆಯಿಂದ 3 ವೆಂಟಿಲೇಟರ್‌ಗಳ ಸರಬರಾಜಾಗಿದೆ. ವೆಂಟಿಲೇಟರ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಕನಿಷ್ಠ 40 ಬೆಡ್‌ಗಳಿಗೆ ಆಮ್ಲಜನಕದ ವ್ಯವಸ್ಥೆ ಕಲ್ಪಿಸಿ ಸುಸಜ್ಜಿತ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು.

ಎಲ್ಲ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ಜ್ವರ ತಪಾಸಣಾ ಕ್ಲಿನಿಕ್‌ಗಳನ್ನು ತೆರೆಯಬೇಕು. ಜ್ವರದ ತಪಾಸಣೆಗೆ ಬರುವ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸದೆ ಚಿಕಿತ್ತೆ ನೀಡಬೇಕು. ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಕುರಿತು ಪ್ರತಿದಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ತಪ್ಪಿದರೆ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

ಹೋಂ ಕ್ವಾರಂಟೈನ್‌ನಲ್ಲಿರುವವರ ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಭೇಟಿನೀಡಿ ಪರಿಶೀಲಿಸುತ್ತಿದ್ದು, ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಕೋವಿಡ್‌ನಿಂದ ಸಾವು ಸಂಭವಿಸದಂತೆ ಎಚ್ಚರ ವಹಿಸಬೇಕು. ಈಚೆಗೆ ಜಿಲ್ಲೆಯಲ್ಲಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಕೋವಿಡ್‌ನಿಂದಲ್ಲ; ಹೃದಯಾಘಾತದಿಂದ ಎಂದರು.

ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಾಗಿದೆ. 1,000ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾದರೂ ಸಾವು ಸಂಭವಿಸದಂತೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಯ ಶ್ರಮ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಅಭಿನಂದಿಸಿದರು.

ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಸವಾಲಿನದಾಗಿದ್ದು, ಜಿಲ್ಲೆಗೆ ಹೊರರಾಜ್ಯಗಳಿಂದ ಹೆಚ್ಚಿನವರು ಬರುತ್ತಿದ್ದಾರೆ. ಅವರಲ್ಲಿ ಕೋವಿಡ್ ರೋಗ ಲಕ್ಷಣಗಳಿರುವ ಮತ್ತು ವಿಶೇಷ ವರ್ಗದವರನ್ನು ಮಾತ್ರ ಪರೀಕ್ಷಿಸಲಾಗುತ್ತಿದ್ದು, ಉಳಿದವರ ಪರೀಕ್ಷೆ ಮಾಡಲಾಗುತ್ತಿಲ್ಲ. ಹಾಗಾಗಿ, ಜಿಲ್ಲೆಯಲ್ಲಿ ತಪಾಸಣೆ ತೀವ್ರವಾಗಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್‌ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.

‘ಸಲಹಾ ಚೀಟಿ ಇಲ್ಲದೆ ಔಷಧಿ ಕೊಡುವಂತಿಲ್ಲ’

ಜಿಲ್ಲೆಯಲ್ಲಿ ಜ್ವರ, ಶೀತ, ಕೆಮ್ಮು ಇರುವ ರೋಗಿಗಳಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ಔಷಧ ವಿತರಿಸಬಾರದು. ವೈದ್ಯರ ಚೀಟಿಯಿಲ್ಲದೆ ಔಷಧ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಮೆಡಿಕಲ್ ಶಾಪ್‌ಗಳು ಪ್ರತಿದಿನ ಮಾರಾಟವಾದ ಔಷಧಗಳ ವಿವರ ನೀಡಬೇಕು. ಕೆಲವು ಮೆಡಿಕಲ್‌ಗಳು ವರದಿ ನೀಡದಿರುವುದು ಗಮನಕ್ಕೆ ಬಂದಿದ್ದು, ನಿಯಮ ಪಾಲಿಸದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.