ಭಾನುವಾರ, ಸೆಪ್ಟೆಂಬರ್ 19, 2021
31 °C
ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ ಅಂತ್ಯೋದಯದ ಆಶಯ; ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯಿಂದ ಬದುಕಲು ಮನೆ, ಶುದ್ಧ ನೀರು, ಶೌಚಾಲಯ, ವಿದ್ಯುತ್ ಹಾಗೂ ಮಕ್ಕಳಿಗೆ ಶಿಕ್ಷಣ ಸೌಲಭ್ಯಗಳು ಸಿಗಬೇಕು. ಈ ನಿಟ್ಟಿನಲ್ಲಿ ವೈಯಕ್ತಿಕ ಫಲಾನುಭವಿಗಳಿಗೆ ಸರ್ಕಾರದಿಂದ ಹೆಚ್ಚು ಅನುದಾನ ಸಿಗಬೇಕಿದ್ದು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಫಲಾನುಭವಿ ಕುಟುಂಬಕ್ಕೆ ಗರಿಷ್ಠ ಆರ್ಥಿಕ ನೆರವು ಕೋರಿ ಮನವಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಅಮೃತ್ ಗಾರ್ಡನ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಅಂತ್ಯೋದಯ’ ಮಾಹಿತಿ ಶಿಬಿರದಲ್ಲಿ ಮಾತನಾಡಿದ ಸಚಿವರು, ಸರ್ಕಾರದ ಯೋಜನೆಗಳು ಅರ್ಹರಿಗೆ ಸಿಗಬೇಕು, ಸಮಾಜ ಕಲ್ಯಾಣ ಇಲಾಖೆಯ ಆಡಳಿತ ಪಾರದರ್ಶಕವಾಗಿರಬೇಕು. ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ, ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಪ್ರತಿನಿಧಿಗಳಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಅಂತ್ಯೋದಯ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಹೇಗೆ ಅರ್ಜಿ ಸಲ್ಲಿಸಬೇಕು, ಯಾರೆಲ್ಲ ಅರ್ಹರು, ಫಲಾನುಭವಿಗಳನ್ನು ಆಯ್ಕೆ ಹೇಗೆ, ಮಧ್ಯವರ್ತಿಗಳ ಕಿರಿಕಿರಿ ಇಲ್ಲದೆ ಹೇಗೆ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂಬ ಮಾಹಿತಿಗಳನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ, ಅಧ್ಯಕ್ಷ, ಉಪಾಧ್ಯಕ್ಷರಿಗೆ, ಮುಖ್ಯವಾಗಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಪ್ರತಿನಿಧಿಗಳಿಗೆ ತಲುಪಿಸುವುದು. ಅವರಿಂದ ಜನಸಾಮಾನ್ಯರಿಗೆ ಮಾಹಿತಿ ಮುಟ್ಟಿಸುವುದು ಅಂತ್ಯೋದಯ’ ಕಾರ್ಯಕ್ರಮದ ಉದ್ದೇಶ ಎಂದರು.

ಉಡುಪಿಯಲ್ಲಿ ಆರಂಭವಾಗಿರುವ ಅಂತ್ಯೋದಯ ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಜನಪ್ರತಿನಿಧಿಗಳ ಹಾಗೂ ಫಲಾನುಭವಿಗಳ ಮಧ್ಯೆ ಸೇತುವೆಯಾಗಬೇಕು ಎಂಬುದು ‘ಅಂತ್ಯೋದಯ’ ಕಾರ್ಯಕ್ರಮದ ಉದ್ದೇಶವಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದರು.

ಮೊರಾರ್ಜಿ ದೇಸಾತಿ ವಸತಿ ಶಾಲೆಗಳು, ವಾಜಪೇಯಿ ವಸತಿ ಶಾಲೆಗಳು, ಕಿತ್ತೂರು ಚೆನ್ನಮ್ಮ, ಆಶ್ರಮ ಶಾಲೆಗಳು, ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಹಾಗೂ ವಾಲ್ಮೀಕಿ, ಅಂಬೇಡ್ಕರ್ ಅಭಿವೃದ್ಧಿ ನಿಯಮದಡಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಂದಿಗೂ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಂದೆ, ಗ್ರಾಮ ಪಂಚಾಯಿತಿಗಳಲ್ಲಿ ಆನ್‌ಲೈನ್‌ ಮೂಲಕ ಸೌಲಭ್ಯಗಳನ್ನು ತಲುಪಿಸುವ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ವಿಶೇಷ ಅಧಿಕಾರ ನೀಡಿ ಸೌಲಭ್ಯಗಳನ್ನು ಅರ್ಹರಿಗೆ ಮುಟ್ಟಿಸುವ ಚಿಂತನೆಗಳು ನಡೆಯುತ್ತಿದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗದ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೊರತೆ ಇದೆ. ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ನಿರ್ಧಿಷ್ಟ ಸಮುದಾಯದಿಂದ ಬೇಡಿಕೆ ಬಂದರೆ ಆಯೋಗ ಖುದ್ದು ಸಮುದಾಯ ವಾಸವಿರುವ ಸ್ಥಳಗಳಿಗೆ ಭೇಟಿನೀಡಿ, ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಕಲೆಹಾಕಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ರಘುಪತಿ ಭಟ್‌, ಲಾಲಾಜಿ ಆರ್‌.ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರವಿಕುಮಾರ್ ಸುರಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ವಸಂತ್ ಕುಮಾರ್, ಕರ್ನಾಟಕ ವಸತಿ ಶಿಕ್ಷನ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ಎನ್‌.ಸಿದ್ದೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು