ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಅರಸು ವಿಚಾರಧಾರೆ ಅಳವಡಿಸಿಕೊಳ್ಳಿ’

ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಯಶ್‌ಪಾಲ್ ಸಲಹೆ
Published 21 ಆಗಸ್ಟ್ 2024, 7:33 IST
Last Updated 21 ಆಗಸ್ಟ್ 2024, 7:33 IST
ಅಕ್ಷರ ಗಾತ್ರ

ಉಡುಪಿ: ಕ್ರಾಂತಿಕಾರಿ ನಾಯಕರಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಶ್ರಮಿಸಿ, ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಯುವಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮಿಷನ್ ಕಂಪೌಂಡ್‌ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಳಾಗಿ ದೀರ್ಘಕಾಲ ಆಡಳಿತ ನಡೆಸಿ, ಹಿಂದುಳಿದ ವರ್ಗದವವರನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಬದುಕಿಗೆ ಆಶಾಕಿರಣವಾಗಿ, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಬರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಮೂಲ ಸೌಕರ್ಯ ಹೊಂದಿರುವ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಪೊಲೀಸ್ ಉಪ ವರಿಷ್ಠಾಧಿಕಾರಿ ಡಿ.ಟಿ ಪ್ರಭು ಮಾತನಾಡಿ, ಮಲಹೊರುವ ಪದ್ಧತಿ ನಿಷೇಧಕ್ಕೆ ಒತ್ತು ನೀಡುವುದರ ಜೊತೆಗೆ ಪೌರಾಡಳಿತ ಸಂಸ್ಥೆಗಳಲ್ಲಿ ಕಾಯಂ ಹುದ್ದೆಗಳನ್ನು ನೀಡುವ ಕೆಲಸವನ್ನು ಅರಸು ಅವರು ಮಾಡಿದ್ದರು. ಕೇಂದ್ರದ 20 ಅಂಶಗಳು ಸೇರಿದಂತೆ ನೂರಾರು ಕಾಯಿದೆಗಳನ್ನು ಅನುಷ್ಠಾನಗೊಳಿಸಿದರು ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸನ್ಮಾನಿಸಿದರು. ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಪೌರಾಯುಕ್ತ ರಾಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಉಡುಪಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ, ಮಲ್ಪೆ ರಾಘವೇಂದ್ರ, ವಿವಿಧ ಹಿಂದುಳಿದ ವರ್ಗಗಳ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿದರು. ಉಡುಪಿ ತಾಲ್ಲೂಕು ವಿಸ್ತರಣಾಧಿಕಾರಿ ಶ್ರೀಕಾಂತ್ ನಿರೂಪಿಸಿದರು. ಸುಗುಣ ವಂದಿಸಿದರು.

ಡಿ.ದೇವರಾಜ್ ಅರಸರ 109ನೇ ಜನ್ಮದಿನ ಆಚರಣೆ

ಕುಂದಾಪುರ: ಇಲ್ಲಿನ ಆರ್‌.ಎನ್‌. ಶೆಟ್ಟಿ ಸಭಾಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ.ಕಿರಣ್ ಕೊಡ್ಗಿ, ‘ರಾಷ್ಟ್ರ ಕಂಡ ಮಹಾನ್ ಮುತ್ಸದ್ದಿಗಳಲ್ಲಿ ಒಬ್ಬರಾದ ಅರಸು ಅವರು, ದುರ್ಬಲ ಮತ್ತು ಹಿಂದುಳಿದ ವರ್ಗಗಳಿಗೆ ಉಚಿತ ನಿವೇಶನ, ಕಡಿಮೆ ವೆಚ್ಚದ ಮನೆ ನಿರ್ಮಾಣದ ಯೋಜನೆ, ಭಾಗ್ಯ ಜ್ಯೋತಿ ಯೋಜನೆ ಹಾಗೂ ಭೂರಹಿತರಿಗೆ ಭೂಮಿ ನೀಡುವ ಮೂಲಕ ಜನರಿಗೆ ಆಶಾಕಿರಣವಾಗಿದ್ದರು’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೊಳೆ, ‘ಅರಸು ಅವರನ್ನು ರಾಜ್ಯ ಹಾಗೂ ದೇಶದ ಜನರು ಇಂದಿಗೂ ನೆನೆಯಲು ಅವರ ಕರ್ತವ್ಯ ಬದ್ಧತೆ ಕಾರಣ. ಸಮಾಜಕ್ಕೆ ಕೊಡುಗೆ ನೀಡಿದವರನ್ನು ಸಮಾಜ ಎಂದಿಗೂ ಮರೆಯುವುದಿಲ್ಲ ಎನ್ನುವುದಕ್ಕೆ ಅರಸು ಅವರ ಧೀಮಂತ ವ್ಯಕ್ತಿತ್ವವೇ ಸಾಕ್ಷಿ’ ಎಂದರು.

ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಶಾಂತ್ ನೀಲಾವರ ಉಪನ್ಯಾಸ ನೀಡಿದರು. ಉಪ ವಿಭಾಗಾಧಿಕಾರಿ ಕೆ.ಮಹೇಶ್‌ಚಂದ್ರ, ತಹಶೀಲ್ದಾರ್ ಎಚ್‌.ಎಸ್‌.ಶೋಭಾಲಕ್ಷ್ಮಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕೆ.ಜಿ, ಪುರಸಭೆಯ ಮುಖ್ಯಾಧಿಕಾರಿ ಆನಂದ.ಜೆ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಶಿಕಲಾ ಇದ್ದರು. ಸ್ವಾತಿ ನಿರೂಪಿಸಿದರು.

ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಕಾರ್ಕಳ: ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯಿತಿ ಕಾರ್ಕಳ ಪುರಸಭೆಯ ಆಶ್ರಯದಲ್ಲಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಿಸಲಾಯಿತು. ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು. ನಿಲಯ ಮೇಲ್ವಿಚಾರಕಿ ಜಯಂತಿ ಉಪನ್ಯಾಸ ನೀಡಿದರು. ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 99.36 ಅಂಕ ಪಡೆದ ಪ್ರತೀಕ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಹಶೀಲ್ದಾರ್ ಪ್ರತಿಭಾ ಆರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ಶೆಟ್ಟಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ್ ಸುಂದರ್ ಇದ್ದರು. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಂತ ನಾರಾಯಣ ಭಟ್ಕಳ ಸ್ವಾಗತಿಸಿದರು. ವಿನಾಯಕ ಬಾಳಗದ್ದೆ ವಂದಿಸಿದರು. ನಿಲಯ ಮೇಲ್ವಿಚಾರಕಿ ಮೇಘಶ್ರೀ ನಿರೂಪಿಸಿದರು. ‌ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸಿಬ್ಬಂದಿಯ ಮನರಂಜನಾ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT