ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಥಪೂರ್ಣ ದೇವರಾಜ ಅರಸು ಜನ್ಮ ದಿನ

20ರಿಂದ 22ರವರೆಗೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ
Last Updated 11 ಆಗಸ್ಟ್ 2022, 13:32 IST
ಅಕ್ಷರ ಗಾತ್ರ

ಉಡುಪಿ: ಸಮಾಜ ಸುಧಾಕರಾದ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ಆ.20 ರಿಂದ 22 ರವರೆಗೆ ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಪ್ರಸನ್ನ ಸೂಚಿಸಿದರು.

ನಗರದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಿ. ದೇವರಾಜ ಅರಸು 107 ನೇ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಡಿ. ದೇವರಾಜ ಅರಸು ರಾಜ್ಯದ ಸಾಮಾಜಿಕ, ಆರ್ಥಿಕ ಆಂದೋಲನಗಳ ಮೂಲಕ ಹಲವಾರು ಜನಹಿತ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರು.

ಅರಸು ಅವರ ದೂರದೃಷ್ಟಿ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಳ ಬಗ್ಗೆ ಅವರಿಗಿದ್ದ ಬದ್ಧತೆಗೆ ಪ್ರತಿಯಾಗಿ ಅರ್ಥಪೂರ್ಣವಾಗಿ ಹಾಗೂ ವಿಶಿಷ್ಟವಾಗಿ ಜಿಲ್ಲಾ ಮಟ್ಟದಲ್ಲಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ನೇಕಾರರು, ಕಮ್ಮಾರರು, ಕುಂಬಾರ, ಬಡಗಿ, ವಿಶ್ವಕರ್ಮ ಸೇರಿದಂತೆ ಕುಲಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಬೇಕು. ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಂದ ಹಾಗೂ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚನೆ ನೀಡಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಕುರಿತ ಪ್ರಬಂಧ ಸ್ಪರ್ಧೆ, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆ, ವಿದ್ಯಾರ್ಥಿನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ, ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಬೇಕು ಎಂದರು.

ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾದವರನ್ನು ನಗದು ಹಾಗೂ ಫಲಕ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ನಿಗಮಗಳ ವ್ಯವಸ್ಥಾಪಕರು, ವಾರ್ತಾಧಿಕಾರಿ ಬಿ.ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT