ಉಡುಪಿ: ಮಹಿಳೆಯರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಸಕಾಲದಲ್ಲಿ ಸೂಕ್ತ ತಪಾಸಣೆ ಮಾಡಿಸಿಕೊಳ್ಳಬೇಕು. ಮಹಿಳೆಯ ಆರೋಗ್ಯ ಚೆನ್ನಾಗಿದ್ದರೆ ಕುಟುಂಬ ಹಾಗೂ ಸಮಾಜದ ಆರೋಗ್ಯವೂ ಉತ್ತಮವಾಗಿರಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ಸೋಮವಾರ ನಗರದ ಅಲಂಕಾರ್ ಚಿತ್ರಮಂದಿರದ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳು ಆರೋಗ್ಯ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಲು, ಪರೀಕ್ಷೆ ಮಾಡಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕಾಯಿಲೆಗಳಿಗೆ ತುತ್ತಾಗುತ್ತಿದ್ದರು. ಈ ಸಮಸ್ಯೆಗೆ ಸೂಕ್ತ ಪರಿಹಾರ ಎಂಬಂತೆ ಸರ್ಕಾರ ಆಯುಷ್ಮತಿ ಕೇಂದ್ರವನ್ನು ಆರಂಭಿಸಿದ್ದು ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳು ಆಯುಷ್ಮತಿ ಕ್ಲಿನಿಕ್‌ನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ಪಡೆಯಬಹುದು. ಮಹಿಳೆಯರು ಕೇಂದ್ರದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಮಾತನಾಡಿ, ಆಯುಷ್ಮತಿ ಕ್ಲಿನಿಕ್‌ನಲ್ಲಿ, ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳಿಗೆ ಪ್ರತಿ ದಿನ ಒಬ್ಬ ತಜ್ಞ ವೈದ್ಯರ ಸೇವೆಯು ಲಭ್ಯವಿದ್ದು, ಲ್ಯಾಬ್ ಪರೀಕ್ಷೆಗಳ ಸೇವೆ, ವಿವಿಧ ಆರೋಗ್ಯ ಸಮಸ್ಯೆಗಳ ಬಗ್ಗೆ ಆಪ್ತ ಸಮಾಲೋಚನೆ ಹಾಗೂ ಉಚಿತ ಔಷಧಿಗಳು ಸಹ ದೊರೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.