ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಸುಂದರ ಬಾಲ್ಯ ಕಿತ್ತುಕೊಳ್ಳಬೇಡಿ’

ಬಾಲ ಕಾರ್ಮಿಕರು ಕಂಡುಬಂದಲ್ಲಿ 1098ಕ್ಕೆ ಕರೆ ಮಾಡಿ: ಸಿ.ಎಂ.ಜೋಷಿ
Last Updated 13 ಜೂನ್ 2019, 19:51 IST
ಅಕ್ಷರ ಗಾತ್ರ

ಉಡುಪಿ:ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡು ಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಸಾರ್ವಜನಿಕರು ಕರೆ ಮಾಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಸಿ.ಎಂ.ಜೋಷಿ ಸಲಹೆ ನೀಡಿದರು.

ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ವಕೀಲರ ಸಂಘ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಜಂಟಿ ಆಶ್ರಯದಲ್ಲಿ ರಜತಾದ್ರಿಯ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಾನೂನಿನಿಂದ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಸಮಾಜಿಕ ಪಿಡುಗು ನಿವಾರಣೆಗೆ ಸಮಾಜ ಭಾಗಿಯಾಗಬೇಕು. ಈ ಪಿಡುಗಿನ ಬಗ್ಗೆ ಅರಿವು ಮೂಡಿಸುವುದರ ಜತೆಗೆ, ಬಾಲ ಕಾರ್ಮಿಕರು ಕೆಲಸ ಮಾಡುವುದು ಕಂಡು ಬಂದರೆ ಸಂಬಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಬಾಲ ಕಾರ್ಮಿಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಕುಟುಂಬದಲ್ಲಿನ ಆರ್ಥಿಕ ಸಮಸ್ಯೆ, ಅನಿವಾರ್ಯ ಸಂದರ್ಭ, ಶಿಕ್ಷಣದ ಕೊರತೆಯಿಂದ ಬಾಲ ಕಾರ್ಮಿಕ ಪದ್ಧತಿಗೆ ಪ್ರಮುಖ ಕಾರಣವಾಗಿದ್ದು, ಇದು ಮತ್ತೆ ತಲೆ ಎತ್ತದಂತೆ ಸಂಪೂರ್ಣ ನಿರ್ಮೂಲನ ಮಾಡಬೇಕಿದೆ ಎಂದು ಮೇಲಿದೆ ಎಂದು ನ್ಯಾಯಾಧೀಶರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಅಸ್ತಿತ್ವದಲ್ಲಿರುವುದು ಸಮಾಜ ತಲೆ ತಗ್ಗಿಸುವ ವಿಚಾರ. ನಾಗರಿಕ ಸಮಾಜದಲ್ಲಿನ ಅಮಾನವೀಯ ಸಂಗತಿಯನ್ನು ತೊಡೆದು ಹಾಕಬೇಕಿದೆ. ಮಕ್ಕಳಿಗೆ ಅವರ ಬಾಲ್ಯವನ್ನು ಕಳೆಯಲು ಅವಕಾಶ ನೀಡಬೇಕು. ಮನೆ ಕೆಲಸಗಳಿಗೆ ಅಥವಾ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ ಎಂದು ಹೇಳಿದರು.

ಬಾಲ ಕಾರ್ಮಿಕ ಪದ್ದತಿಯಿಂದ ಹೊರಬಂದು, ವಿದ್ಯಾಭ್ಯಾದ ಮುಂದುವರಿಸಿ ದ್ವಿತೀಯ ಪಿಯುಸಿಯಲ್ಲಿ ಪ್ರಥಮ ದರ್ಜೆ ಪಡೆದ ರಾಜು ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಾವೇರಿ ಬಾಲ ಕಾರ್ಮಿಕ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು. ಹೆಚ್ಚುವರಿಜಿಲ್ಲಾ ಸರ್ಕಾರಿ ವಕೀಲ ಮಹಮ್ಮದ್ ಸುಹಾನ್ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಎಎಸ್‌ಪಿ ಕುಮಾರಚಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಬಾಲಕೃಷ್ಣ, ಉಡುಪಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಫುರ್ಟಾಡೋ, ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಉಡುಪಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಗದೀಶ ಉಪಸ್ಥಿತರಿದ್ದರು.

ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್ ಸ್ವಾಗತಿಸಿ ವಂದಿಸಿದರು. ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT