ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ 20 ಆಕ್ಸಿಜನ್ ಬೆಡ್‌

ಉಸಿರಾಟದ ಸಮಸ್ಯೆ ಇರುವ ರೋಗಿಗಳ ಸಂಖ್ಯೆ ಹೆಚ್ಚಳ: ಸಚಿವ ಬಸವರಾಜ ಬೊಮ್ಮಾಯಿ
Last Updated 2 ಮೇ 2021, 14:59 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರು ಹಾಗೂ ತೀವ್ರ ಉಸಿರಾಟದ ಸಮಸ್ಯೆ ಹೊಂದಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ವ್ಯವಸ್ಥೆ ಹೊಂದಿರುವ ಬೆಡ್‌ಗಳ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ಜಿಲ್ಲಾ ಆಸ್ಪತ್ರೆಗೆ ಭೇಟಿನೀಡಿ ಪರಿಶೀಲನೆ ನಡೆಸಿದ ಸಚಿವರು, ಈಚೆಗೆ ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಕೋವಿಡ್‌ ನೆಗೆಟಿವ್ ಇದ್ದರೂ, ಉಸಿರಾಟದ ಸಮಸ್ಯೆ ಇರುವ ರೋಗಿಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ಮುಂದೆ ಆಕ್ಸಿಜನ್ ಬೆಡ್‌ಗಳ ಕೊರತೆ ಕಾಡಬಹುದು ಎಂಬು ಆತಂಕವಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಆಕ್ಷಿಜನ್‌ ಪೂರೈಕೆಯ ಬೆಡ್‌ಗಳನ್ನು ಹಾಕಲಾಗುವುದು. ಉಸಿರಾಟ ಸಂಬಂಧಿ ಸಮಸ್ಯೆಗಳಿರುವ ರೋಗಿಗಳಿಗೆ ಬೆಡ್‌ಗಳನ್ನು ಮೀಸಲಿಡಲಾಗುವುದು. ಕೋವಿಡ್‌ ವಾರ್ಡ್‌ನಲ್ಲಿ ಸಾರಿ ಸಮಸ್ಯೆಯ ರೋಗಿಗಳನ್ನು ಹಾಕದಂತೆ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರತಿದಿನ 600 ರಿಂದ 660 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿರುವ ಲ್ಯಾಬ್‌ನಲ್ಲಿ ಹೆಚ್ಚು ಕೋವಿಡ್‌ ಪರೀಕ್ಷೆ ಮಾಡಲು ಸಾಧ್ಯವಾಗುತ್ತಿಲ್ಲ. ಪೂಲಿಂಗ್ ವ್ಯವಸ್ಥೆಯಲ್ಲಿ ಪ್ರತಿದಿನ 2,000 ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಲ್ಯಾಬ್‌ನ ಪರೀಕ್ಷಾ ಸಾಮರ್ಥ್ಯವನ್ನು 3,000ಕ್ಕೆ ಹೆಚ್ಚಿಸುವ ತೀರ್ಮಾನ ಮಾಡಲಾಗಿದೆ. ಹೆಚ್ಚವರಿಯಾಗಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಪರೀಕ್ಷೆ, ಸೋಂಕು ಪತ್ತೆ, ಹಾಗೂ ಚಿಕಿತ್ಸೆಗೆ ಒತ್ತು ನೀಡಲಾಗುವುದು. ಹೊರ ರಾಜ್ಯಗಳಿಂದ ಉಡುಪಿಗೆ ಬಂದವರ ಮೇಲೆ ನಿಗಾ ಇಡಲು ಪಂಚಾಯಿತಿ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ ಫೋರ್ಸ್‌ ರಚನೆ ಮಾಡಲಾಗಿದೆ. ಕೋವಿಡ್ 2ನೇ ಅಲೆ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ಜನಸಂದಣಿ ತಪ್ಪಿಸಲು ಸರ್ಕಾರ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ವಿಸ್ತರಿಸಿದೆ. ಈ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಬಾರದು. ರೆಮೆಡಿಸಿವರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇದೇವೇಳೆ ಬೊಮ್ಮಾಯಿ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT