ಬುಧವಾರ, ಮೇ 12, 2021
27 °C
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೊಮ್ಮಾಯಿ ಸೂಚನೆ

ಪರೀಕ್ಷೆ ಹೆಚ್ಚು ಮಾಡಿ ಸೋಂಕು ಪತ್ತೆ ಹಚ್ಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚುಮಾಡಿ, ಸೋಂಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ವಿಕಾಸಸೌಧದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದ ಸಚಿವರು, ಪ್ರತಿದಿನ 3,000ದಿಂದ 4,000ಕ್ಕೆ ಕೋವಿಡ್‌ ಪರೀಕ್ಷೆ ಹೆಚ್ಚಿಸಬೇಕು. ಅಗತ್ಯಬಿದ್ದರೆ ಗಂಟಲು ದ್ರವದ ಮಾದರಿ ಸಂಗ್ರಹವನ್ನು ಖಾಸಗಿ ಲ್ಯಾಬ್‌ಗಳಲ್ಲಿ ನಡೆಸಿ, ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.

ಸೋಂಕಿತರ 30 ಪ್ರಾಥಮಿಕ ಸಂಪರ್ಕಿತರಿಗೆ ಪರೀಕ್ಷೆ ನಡೆಸಬೇಕು. ನಗರ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ಕೋವಿಡ್ ಪರೀಕ್ಷೆ ಮಾಡಬೇಕು. ಆಸ್ಪತ್ರೆಗಳಲ್ಲಿ ದಾಖಲಾದ ಸೋಂಕಿತರ ಚಿಕಿತ್ಸೆಗೆ ಹೆಚ್ಚಿನ ಕಾಳಜಿ ವಹಿಸಿ, ಬೆಡ್‌ಗಳ ಕೊರತೆಯದಂತೆ ಎಚ್ಚರವಹಿಸಿ ಎಂದು ಸಚಿವ ಬೊಮ್ಮಾಯಿ ಸೂಚನೆ ನೀಡಿದರು.

ಕೋವಿಡ್ ದೃಡಪಟ್ಟು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ನಿಯಮಿತವಾಗಿ ಭೇಟಿನೀಡಿ ಪರಿಶೀಲಿಸಬೇಕು. ಸೋಂಕಿತರು ಮನೆ ಬಿಟ್ಟು ಹೊರೆಗೆ ತಿರುಗಾಡದಂತೆ ನಿಗಾ ವಹಿಸಬೇಕು ಎಂದರು.

ಕೊರೊನಾ ನಿಯಂತ್ರಣಕ್ಕೆ ಜಾರಿಗೆ ತರಲಾಗಿರುವ ರಾತ್ರಿ ಹಾಗೂ ವಾರಂತ್ಯದ ಕರ್ಫ್ಯೂ ಜಾರಿ ಸಂದರ್ಭ ಸಾರ್ವಜನಿರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಎಸ್‌ಪಿಗೆ ಸೂಚನೆ ನೀಡಿದರು.

ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುವುದು ಅವಶ್ಯ ಎಂದು ಕಂಡುಬಂದರೆ ತಕ್ಷಣ ಖಾಸಗಿ ಆಸ್ಪತ್ರೆಗಳಲ್ಲಿ ಎಬಿಆರ್‌ಕೆ ಯೋಜನೆ ಅಡಿಯಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡಬೇಕು. ಸಾಮಾನ್ಯ ರೋಗಿಗಳಾಗಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಂತರ ಉಲ್ಲಂಘನೆಯಾಗುವ ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಡಿ. ಧಾರ್ಮಿಕ ಕಾರ್ಯಗಳನ್ನು ದೇವಾಲಯದೊಳಗೆ ನಿಗಧಿತ ಸಂಖ್ಯೆಗೆ ಸೀಮಿತಗೊಳಿಸಿ ನಡೆಸಬೇಕು. ಮೆರವಣಿಗೆಗೆ ಅವಕಾಶ ನೀಡಬೇಡಿ. ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಂತೆ ಧಾರ್ಮಿಕ ಕಾರ್ಯಕ್ರಮ ನಡೆಯಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಡಿಎಚ್‌ಒ ಡಾ.ಸುದೀರ್ ಚಂದ್ರ ಸೂಡಾ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು