ಬುಧವಾರ, ಸೆಪ್ಟೆಂಬರ್ 28, 2022
27 °C
ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ

ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಡಿಕೆಯ ನೀರು ಮುಟ್ಟಿದ ಕಾರಣಕ್ಕೆ ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರವಾಗಿದ್ದು ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಬಿಜೆಪಿ ಎಸ್‌.ಸಿ ಮೋರ್ಚಾ ಗುರುವಾರ ಪ್ರತಿಭಟನೆ ನಡೆಸಿತು.

ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಮಾತನಾಡಿ, ಶಿಕ್ಷಕನಿಂದ ಥಳಿತಕ್ಕೊಳಗಾದ 9 ವರ್ಷದ ಬಾಲಕ ಒಂದು ತಿಂಗಳು ಉದಯಪುರ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ಕಾರಣನಾಗಿರುವ ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಬಾಲಕನ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಎಫ್.ಐ.ಆರ್ ದಾಖಲಿಸಲೂ ಸಿದ್ಧರಿಲ್ಲದ ನಿರ್ಲಜ್ಜ ಕಾಂಗ್ರೆಸ್‌ ಸರ್ಕಾರ ದಲಿತರ ಬಗ್ಗೆ ದೊಡ್ಡ ಮಾತುಗಳನ್ನಾಡುವುದು ದುರಂತ. ಮಡಕೆಯ ನೀರು ಮುಟ್ಟಿದ್ದಕ್ಕೆ ಬಾಲಕನ ಕೊಲೆಯಾಗಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ವಾಗ್ದಾಳಿ ನಡೆಸಿದರು.

ರಾಜಸ್ಥಾನದಲ್ಲಿ ನಡೆಯುತ್ತಿರುವುದು ಮೊದಲ ಘಟನೆಯಲ್ಲ. ಹಿಂದೆ ಕನಯ್ಯಲಾಲ್ ಸಾವು ಕೂಡ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯೇ ನಡೆದಿದೆ. ರಾಜಸ್ಥಾನದಲ್ಲಿರುವುದು ಜನ ವಿರೋಧಿ ಸರ್ಕಾರ ಎಂದು ಟೀಕಿಸಿದರು.

ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಮಾತನಾಡಿ ಶಿಕ್ಷಕ ವಿದ್ಯೆ ನೀಡುವ ಬದಲಿಗೆ ಸಾವು ನೀಡಿರುವುದು ಅತ್ಯಂತ ಅಮಾನವೀಯ ಹಾಗೂ ನೋವಿನ ಸಂಗತಿ. ರಾಜಸ್ಥಾನದ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಮುಂದೆ ತಕ್ಕ ಬೆಲೆ ತೆರಲಿದೆ. ಅಸಂಬದ್ಧ ವಿಚಾರಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ಮುಖಂಡರು ದಲಿತ ಬಾಲಕನ ಹತ್ಯೆ ಬಗ್ಗೆ ಮಾತನಾಡದಿರುವುದು ಖಂಡನೀಯ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಇದ್ದರು.

ಜಿಲ್ಲಾ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ಕೈಪುಂಜಾಲು ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು