ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ: ಜೀವ ಹಾನಿಯಾಗದಂತೆ ಎಚ್ಚರವಹಿಸಿ

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
Last Updated 20 ಜುಲೈ 2021, 14:32 IST
ಅಕ್ಷರ ಗಾತ್ರ

ಉಡುಪಿ: ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದಿಂದ ಜೀವ ಹಾನಿ ಸಂಭವಿಸದತೆ ಎಚ್ಚರವಹಿಸಬೇಕು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾನತನಾಡಿದ ಸಿಎಂ, ನೆರೆ ವಿಕೋಪದ ಸಂದರ್ಭದಲ್ಲಿ ವೃದ್ಧರು, ಮಹಿಳೆಯರು ಹಾಗೂ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಜೀವ ಹಾನಿಯಾದಗಂತೆ ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 4 ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ವಿಕೋಪ ನಿರ್ವಹಣೆಗೆ ನೆರವು ನೀಡಲು ಸಿದ್ಧವಾಗಿದ್ದು, ಅಗತ್ಯವಿದ್ದಲ್ಲಿ ತಕ್ಷಣ ನೆರವು ಪಡೆಯಬೇಕು. ಜಿಲ್ಲಾ ಕೇಂದ್ರಗಳಲ್ಲಿ ವಿಕೋಪ ತಡೆಗೆ ಅಗತ್ಯವಿರುವ ಸುರಕ್ಷತಾ ಉಪಕರಣ ಹಾಗೂ ಕಾಳಜಿ ಕೇಂದ್ರಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.

ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಶೀಘ್ರ ಪರಿಹಾರ ವಿತರಿಸಿ. ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಇರಲಿ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ವಿಕೋಪ ಸಂದರ್ಭದಲ್ಲಿ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯಿರಿ. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ಸಿಎಂ ಸೂಚಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ವಿಕೋಪ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ ಸಿದ್ಧಪಡಿಸಲಾಗಿದೆ. ಮಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ಅಗತ್ಯವಿರುವ ಫೈಬರ್ ದೋಣಿಗಳನ್ನು ನೀಡಲಾಗಿದೆ.

ನೆರೆ ಸಹಾಯಕ್ಕೆ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಅಧಿಕಾರಿಗಳಿಗೆ ಪ್ರಾಕೃತಿಕ ವಿಕೋಪ ತಡೆಗೆ ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ನೆರೆಗೆ ಒಬ್ಬರು ಮೃತಪಟ್ಟಿದ್ದು, 5 ಮನೆಗಳು ಪೂರ್ಣ ನಾಶ ಹಾಗೂ 196 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 14 ಕೊಟ್ಟಿಗೆಗಳಿಗೆ ಹಾನಿಯಾಗಿದ್ದು, ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ₹ 5.90 ಕೋಟಿ ಇದೆ ಎಂದು ಸಿಎಂಗೆ ಮಾಹಿತಿ ನೀಡಿದರು.

ವೀಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್‌ಪಿ ವಿಷ್ಣುವರ್ಧನ್, ನಕ್ಸಲ್ ನಿಗ್ರಹ ಪಡೆಯ ಎಸ್‌ಪಿ ಅಖಿಲ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT